ಕರ್ನಾಟಕಪ್ರಮುಖ ಸುದ್ದಿ

ಕಾನೂನು ಸುವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ಅಗತ್ಯ: ಮಂಡ್ಯ ಎಸ್‍.ಪಿ ರಾಧಿಕಾ

ಮಂಡ್ಯ (ನ.8): ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ರೂಪಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ರಾಧಿಕಾ ಅವರು ತಿಳಿಸಿದರು.

ಅವರು ಇಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ, ಹೊರಾವರಣ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಮಂಡ್ಯ ಇಲ್ಲಿ “ಘನತೆಯ ಬದುಕು” ಎಂಬ ಮೂರು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದ್ದು, ಮಹಿಳೆಯರು ಎಲ್ಲಾ ರಂಗದಲ್ಲಿಯೂ ತಮ್ಮ ಛಾಪು ಮೂಡಿಸಬೇಕು ಈ ನಿಟ್ಟಿನಲ್ಲಿ ವಿದ್ಯಾರ್ಥಿಯಾಗಿ ಇರುವ ದಿನದಿಂದಲೇ ಒಂದು ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ಮುಂದಾಗಬೇಕು ಎಂದು ತಿಳಿಸಿದ ಅವರು ವಿದ್ಯಾರ್ಥಿನಿಯರು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳಾದ ಪ್ರೊ. ಸಬಿಹಾ ಅವರು ವಿಶ್ವವಿದ್ಯಾನಿಲಯದ ವಿವಿಧ ತರಬೇತಿ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಶೈಕ್ಷಣಿಕ ಮೌಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಡ್ಯ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ವಿ.ಡಿ ಸುವರ್ಣ ಅವರು ಮಾತನಾಡಿ, ನಮ್ಮಲ್ಲಿರುವ ಉತ್ತಮ ಮೌಲ್ಯಗಳನ್ನು ಉಪಯೋಗಿಸಿಕೊಂಡು ಮಾದರಿ ಸಮಾಜವನ್ನು ನಿರ್ಮಿಸಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹೊರಾವರಣ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿಗಳಾದ ಪ್ರೊ. ಎನ್.ಚಂದ್ರಪ್ಪ ಹಾಗೂ ಪ್ರೊ. ವಿಜಯಶ್ರೀ ಸಬರದವರು, ಡಾ.ಹೇಮಲತಾ.ಎಚ್.ಎಂ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

(ಎನ್‍ಬಿಎನ್‍)

Leave a Reply

comments

Related Articles

error: