ಮೈಸೂರು

ಟೋಲ್ ಸಂಗ್ರಹಿಸಲು ಕರೆದಿದ್ದ ಟೆಂಡರ್ ಹಣವನ್ನು ಸರ್ಕಾರಕ್ಕೆ ಪಾವತಿಸದಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ನ.9-ಚಾಮುಂಡಿಬೆಟ್ಟದ ಗ್ರಾಮ ಪಂಚಾಯಿತಿ ವತಿಯಿಂದ ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಂದ ಟೋಲ್ ಸಂಗ್ರಹಿಸಲು ಕರೆದಿದ್ದ ಟೆಂಡರ್ ಹಣವನ್ನು ಸರ್ಕಾರಕ್ಕೆ ಪಾವತಿಸದಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ವೇದಿಕೆಯವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಸತಿ ಯೋಜನೆಯ ಸಮರ್ಪಕ ಅನುಷ್ಟಾನಕ್ಕೆ ಹಾಗೂ ಯೋಜನೆಯ ದುರ್ಬಳಕೆಯನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮವಹಿಸುವಂತೆ ಹಾಗೂ ಚಾಮುಂಡಿಬೆಟ್ಟದ ಗ್ರಾಮ ಪಂಚಾಯಿತಿ ವತಿಯಿಂದ ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಂದ ಟೋಲ್ ಸಂಗ್ರಹಿಸಲು ಟೆಂಡರ್ ಕರೆದಿದ್ದು ಸರಿಯಷ್ಟೆ. ಟೆಂಡರ್ ನ ಯಶಸ್ವಿ ಬಿಡ್ಡುದಾರರು ಸರ್ಕಾರಕ್ಕೆ ಟೆಂಡರ್ ಹಣ ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದು, ಇದಕ್ಕೆ ಟೆಂಡರ್ ದಾರರು ಹಾಗೂ ಅಂದಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ  ಕುಮ್ಮಕ್ಕು ಇದೆ ಎಂದು ಆರೋಪಿಸಿದರು.

ಚಾಮುಂಡಿಬೆಟ್ಟದ ಸರ್ವೆ ನಂ.30/1ರ ಸಾಗುವಳಿ ಜಮೀನಿನಲ್ಲಿ ವಾಣಿಜ್ಯ ಮಳಿಗೆಯನ್ನು ಅಕ್ರಮ ಹಾಗೂ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರೂ ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಂಚ ರುಸುವತ್ತುಗಳಿಗೆ ಪಂಚಾಯಿತಿಗಳಿಗೆ ಆದಾಯ ವಂಚಿಸಿರುವ ಬಿಡ್ಡುದಾರರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಂಬಂಧಪಟ್ಟ ಕಂದಾಯ ಇಲಾಖಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಅಕ್ರಮವೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸುವಲ್ಲಿ ನಿರ್ಲಕ್ಷ್ಯ ವಹಿಸಿದಲ್ಲಿ ವೇದಿಕೆ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ‍್ಯಕ್ಷ ಡಿ.ಎಸ್.ಸಿದ್ದಲಿಂಗಮೂರ್ತಿ, ರಾಜ್ಯ ಉಪಾಧ್ಯಕ್ಷ ಈಶ್ವರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಶಂಕರ್, ವಿಭಾಗೀಯ ಅಧ್ಯಕ್ಷ ಎಂ.ರೇವಣ್ಣ, ಜಿಲ್ಲಾಧ್ಯಕ್ಷ ಹಿನಕಲ್ ಸೋಮು, ತಾಲೂಕು ಅಧ್ಯಕ್ಷ ಧನಂಜಯ ಇತರರು ಪಾಲ್ಗೊಂಡಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: