ಕರ್ನಾಟಕಪ್ರಮುಖ ಸುದ್ದಿ

ಕರ್ನಾಟಕದಿಂದಲೇ ಪ್ರವಾಸ ಆರಂಭಿಸಲು ನಿರ್ಧರಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ರಾಜ್ಯ(ಬೆಂಗಳೂರು)ಡಿ.6:-  ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ಗಾಂಧಿ ಕರ್ನಾಟಕದಿಂದಲೇ ಪ್ರವಾಸ ಆರಂಭಿಸಲು ನಿರ್ಧರಿಸಿದ್ದು, ಇದಕ್ಕಾಗಿ ರಾಜ್ಯ ಕಾಂಗ್ರೆಸ್ ನಾಯಕರು, ನೂತನ ಸಾರಥಿಯನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಿದ್ದಾರೆ.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಹುಲ್ ಗಾಂಧಿ ಮರಳಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದಿಂದಲೇ ತಮ್ಮ ಪ್ರವಾಸ ಆರಂಭಿಸಲಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಇಲ್ಲವೆ ಮುಂದಿನ ತಿಂಗಳ ಮೊದಲ ವಾರ ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ರಾಹುಲ್ ಗಾಂಧಿ ಅವರು ಹೇಳಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಬೃಹತ್ ಸಮಾವೇಶ ನಡೆಸಿ, ರಾಹುಲ್ ಗಾಂಧಿಯವರನ್ನು ಸನ್ಮಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಒಪ್ಪಿದರೆ ಬೃಹತ್ ಮಟ್ಟದಲ್ಲಿ ಸಮಾವೇಶ ನಡೆಸುವ ಮೂಲಕ ಆ ಸಮಾವೇಶದಿಂದಲೇ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮೈಸೂರು ವಿಭಾಗದ ಪ್ರಮುಖ ನಾಯಕರ ಸಭೆಯಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣು ಗೋಪಾಲ್ ಈ ವಿಷಯವನ್ನು ತಿಳಿಸಿದ್ದು, ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುವ ಜೊತೆಗೆ ಪಕ್ಷ ಸಂಘಟನೆಯಲ್ಲಿ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆರಂಭಿಸಿರುವ ಮನೆಮನೆಗೆ ಕಾಂಗ್ರೆಸ್ ಪಕ್ಷದ ಅಭಿಯಾನ ಕಾರ್ಯಕ್ರಮವನ್ನು ಇನ್ನೂ 10 ದಿನಗಳ ಕಾಲ ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅಧಿಕಾರ ನೀಡುವಂತೆ ಜನರಿಗೆ ಮನವಿ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಹುಲ್ ಗಾಂಧಿ ಅವರು ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆಯೂ ಮುಖಂಡರುಗಳಿಗೆ ಸೂಚನೆ ನೀಡಲಾಗಿದೆ.

ಮನೆಮನೆಗೆ ಕಾಂಗ್ರೆಸ್ ಅಭಿಯಾನದ ವೇಳೆ ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿರುವ 100 ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳುವ ಮೂಲಕ ಪಕ್ಷ ಸಂಘಟನೆಗೆ ಆದ್ಯತೆ ನೀಡಲು ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: