ಕರ್ನಾಟಕ

ತಾಕತ್ತಿದ್ದರೆ ಶ್ವೇತಪತ್ರ ಹೊರಡಿಸಿ : ಕಾಂಗ್ರೆಸ್‍ಗೆ ಬಿಜೆಪಿ ಸವಾಲು

ರಾಜ್ಯ(ಮಡಿಕೇರಿ) ಡಿ.18 : – ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣವಾಗಿ ಕಡೆಗಣಿಸಿದ್ದು, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೇವಲ 200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯದರ್ಶಿ ಮನು ಮುತ್ತಪ್ಪ, ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಾಕತ್ತಿದ್ದರೆ ಕಾಂಗ್ರೆಸ್ಸಿಗರು ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದಾಗ ಕೊಡಗು ಜಿಲ್ಲೆಗೆ 1800 ಕೋಟಿ ಅನುದಾನ ಹರಿದು ಬಂದಿದ್ದು, ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆದರೆ, ಕಾಂಗ್ರೆಸ್ ಸರ್ಕಾರ ಜಿಲ್ಲೆಯನ್ನು ಅಸಡ್ಡೆ ಮನೋಭಾವದಿಂದ ನೋಡುತ್ತಿದ್ದು, ಇಲ್ಲಿಯವರೆಗೆ ಕೇವಲ 200 ಕೋಟಿ ಅನುದಾನ ಬಂದಿದೆ ಎಂಬುವುದನ್ನು ಸ್ವತಃ ಕಾಂಗ್ರೆಸ್ಸಿನ ಕೆಲವು ಮುಖಂಡರುಗಳೇ ಒಪ್ಪಿಕೊಳ್ಳುತ್ತಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಅವಧಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧವೆಂದು ತಿಳಿಸಿದ ಮನು ಮುತ್ತಪ್ಪ, ಬಿಡುಗಡೆಯಾದ ಅನುದಾನದ ಬಗ್ಗೆ ಕಾಂಗ್ರೆಸ್ಸಿಗರು ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಒಂದು ಕೆಡಿಪಿ ಸಭೆಯನ್ನು ಮಾತ್ರ ಮಾಡಿದ್ದು, ಅರ್ಧ ಗಂಟೆಯಲ್ಲೆ ಈ ಸಭೆ ಮುಗಿದಿದೆ. ಜಿಲ್ಲೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ಅತೀ ಹೆಚ್ಚು ಮಂದಿ ಅಧಿಕಾರಿಗಳ ಕೊರತೆಯನ್ನು ಜಿಲ್ಲೆಯ ಸರ್ಕಾರಿ ಕಛೇರಿಗಳು ಎದುರಿಸುತ್ತಿವೆ. ಕಾಂಗ್ರೆಸ್ಸಿಗರಿಗೆ ಅಧಿಕಾರ ನಡೆಸಲು ನೈತಿಕ ಹಕ್ಕಿಲ್ಲವೆಂದ ಮನುಮುತ್ತಪ್ಪ, ಅಭಿವೃದ್ಧಿ ಬಗ್ಗೆ ಡೋಂಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಶಾಸಕರುಗಳು ವಿಧಾನಸಭಾ ಅಧಿವೇಶನಕ್ಕೆ ಹಾಜರಾಗುವುದಿಲ್ಲವೆಂದು ಮಾಹಿತಿಯ ಕೊರತೆಯನ್ನು ಎದುರಿಸುತ್ತಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅರ್ಥವಿಲ್ಲದ ಹೇಳಿಕೆ ನೀಡಿದ್ದಾರೆ. ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಅತಿಹೆಚ್ಚು ಹಾಜರಾತಿ ಹೊಂದಿರುವ ಶಾಸಕರುಗಳ ಸಾಲಿನಲ್ಲಿ ಕೆ.ಜಿ. ಬೋಪಯ್ಯ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಇಬ್ಬರೂ ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡು ಜಿಲ್ಲೆಯ ಪರವಾಗಿ ಮಾತನಾಡಿದ್ದಾರೆ ಎಂದು ಸಮರ್ಥಿಸಿಕೊಂಡರು. ಗುಜರಾತ್‍ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಿದ್ದು, ಈ ಗೆಲುವು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯೆಂದು ಅಭಿಪ್ರಾಯಪಟ್ಟರು. ಕೊಡಗಿನ ಎರಡೂ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆಯೆಂದು ಮನುಮುತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಡಿಕೇರಿ ತಾಲೂಕು ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿ ಕೋಡೀರ ಪ್ರಸನ್ನ, ವೀರಾಜಪೇಟೆ ತಾಲ್ಲೂಕು ಅಧ್ಯಕ್ಷ ಅರುಣ್ ಭೀಮಯ್ಯ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಕೊಮಾರಪ್ಪ ಹಾಗೂ ಮಡಿಕೇರಿ ನಗರಾಧ್ಯಕ್ಷ ಮಹೇಶ್ ಜೈನಿ ಉಪಸ್ಥಿತರಿದ್ದರು.    (ಕೆಸಿಐ,ಎಸ್.ಎಚ್)

Leave a Reply

comments

Related Articles

error: