ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಅಪರಾಧದ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ : ರಾಮಲಿಂಗಾರೆಡ್ಡಿ

ರಾಜ್ಯ(ಬೆಂಗಳೂರು)ಫೆ.3:- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಅಪರಾಧದ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕಾಡುಗೊಂಡನಹಳ್ಳಿಯ ನೂತನ ಪೊಲೀಸ್ ಠಾಣೆಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಅಪರಾಧ ಪ್ರಮಾಣ ಶೇ. 2ರಷ್ಟು ಇಳಿಕೆಯಾಗಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 7ರಷ್ಟು ಅಪರಾಧ ಪ್ರಕರಣಗಳು ನಡೆದಿದ್ದವು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಶೇ. 5ರಷ್ಟು ಅಪರಾಧ ಪ್ರಕರಣಗಳು ನಡೆದಿದ್ದು, ಅಷ್ಟರ ಮಟ್ಟಿಗೆ ಅಪರಾಧ ಪ್ರಮಾಣವನ್ನು ಕಡಿಮೆ ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಮುಖಂಡರುಗಳು ಅಪರಾಧ ಪ್ರಮಾಣದ ಅಂಕಿ-ಅಂಶಗಳನ್ನು ನೋಡಿದರೆ ನಮ್ಮ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರಲಿಲ್ಲ. ಪೊಲೀಸ್ ಅಧಿಕಾರಿಗಳು ಬಿಜೆಪಿ ಮುಖಂಡರುಗಳಿಗೆ ಅಪರಾಧ ಪ್ರಮಾಣದ ಅಂಕಿ-ಅಂಶಗಳ ಬಗ್ಗೆ ಮಾಹಿತಿ ನೀಡಬೇಕೆಂದು ಸಲಹೆ ನೀಡಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿಯೇ ನಡೆದಿರಲಿಲ್ಲ. ಆದರೆ, ನಮ್ಮ ಸರ್ಕಾರ ಕಳೆದ 5 ವರ್ಷಗಳಲ್ಲಿ 30 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿದೆ. ಅಲ್ಲದೆ 11 ಸಾವಿರಕ್ಕೂ ಹೆಚ್ಚು ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ ಎಂದರು.

ಪೊಲೀಸ್ ಕಲ್ಯಾಣ, ಅತ್ಯಾಧುನಿಕ ಸೌಲಭ್ಯ, ಹೊಸ ಠಾಣೆಗಳ ನಿರ್ಮಾಣ ಸೇರಿದಂತೆ ಪೊಲೀಸ್ ಇಲಾಖೆಯನ್ನು ಸದೃಢಗೊಳಿಸಲು 2 ಸಾವಿರಕ್ಕೂ ಹೆಚ್ಚು ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಬಗ್ಗೆ ಬಿಜೆಪಿ ಮುಖಂಡರು ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಿಗೆ ಜವಾಬ್ದಾರಿಯುತವಾಗಿ ಪ್ರತಿಕ್ರಿಯೆ ನೀಡುವುದು ನನ್ನ ಕರ್ತವ್ಯವಲ್ಲವೇ ಎಂದು ಪ್ರಶ್ನಿಸಿದರು.

ಬಾಯಿಗೆ ಬಂದಂತೆ ಮಾತನಾಡಿ, ಕೋಮು ಭಾವನೆ ಸೃಷ್ಟಿಸಲು ಯತ್ನಿಸುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಶೋಭಾಕರಂದ್ಲಾಜೆ, ಸುರೇಶ್ ಕುಮಾರ್ ಇನ್ನಿತರ ಬಿಜೆಪಿ ಮುಖಂಡರ ಬಾಯಿಗೆ ಬೀಗ ಹಾಕಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಸೂಚಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರನ್ನು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್, ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಇನ್ನಿತರರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: