ಕರ್ನಾಟಕ

ಫೆ.18 ರಂದೇ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

19, ರಂದು ಶ್ರವಣಬೆಳಗೊಳ ಭೇಟಿ, ಮೈಸೂರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ, ಬೃಹತ್ ರ್‍ಯಾಲಿ ಹಿನ್ನೆಲೆ

ಮೈಸೂರು (ಫೆ.15): ಪ್ರಧಾನಿ ನರೇಂದ್ರ ಮೋದಿ ಅವರು ಫೆ.19ರಂದು ಶ್ರವಣಬೆಳಗೊಳ ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಒಂದು ದಿನ ಪೂರ್ವಭಾವಿಯಾಗಿ ಫೆ.18ರಂದೇ ಮೈಸೂರಿಗೆ ಆಗಮಿಸಲಿದ್ದಾರೆ.

ಫೆ.18 ರಂದು ರಾತ್ರಿ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಪ್ರಧಾನಿ ಮೋದಿ ಅವರು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಐತಿಹಾಸಿಕ ಲಲಿತ್‍ ಮಹಲ್ ಪ್ಯಾಲೆಸ್ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಫೆ.19ರಂದು ಬೆಳಗ್ಗೆ 10.30ಕ್ಕೆ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿಡಿಯೋ ಸಂವಾದ ನಡೆಸಲಿದ್ದು, ಮಧ್ಯಾಹ್ನ 12.30ಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ಶ್ರವಣಬೆಳಗೊಳಕ್ಕೆ ತೆರಳಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಪ್ರಧಾನಿ ಮೋದಿ ಅವರು ಸಂಜೆ 4ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ದಿಲ್ಲಿಗೆ ಪ್ರಯಾಣಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಹಾಸನ ಜಿಲ್ಲೆಯಲ್ಲಿ ಹಲವು ಮುಖಂಡರು ಚುನಾವಣೆ ಸಂಧರ್ಭದಲ್ಲಿ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದು, ಮೋದಿ ರ್‍ಯಾಲಿಯತ್ತ ಎಲ್ಲರ ಚಿತ್ತ ನೆಟ್ಟಿದೆ.

(ಎನ್‍ಬಿ)

Leave a Reply

comments

Related Articles

error: