ಕರ್ನಾಟಕ

ಕರ್ನಾಟಕ ಸರಕಾರ ಅತ್ಯಂತ ಭ್ರಷ್ಟ ಸರಕಾರ: ಅಮಿತ್ ಶಾ

ರಾಜ್ಯದ ಸರಕಾರ ಅತ್ಯಂತ ಭ್ರಷ್ಟಾಗಿದ್ದು, ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಕ್ಕೆ ನೀರೆರೆದು ಪೋಷಿಸುತ್ತಿದ್ದಾರೆ. ಇಂತಹ ಸರಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತನ್ನಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷದ ರಾಜ್ಯ ನಾಯಕರಿಗೆ ಕರೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ರಾಜ್ಯ ಬಿಜೆಪಿ ಘಟಕ ಆಯೋಜಿಸಿದ್ದ ಹಿಂದುಳಿದ ವರ್ಗಗಳ ‘ಏಕತಾ ಸಮಾವೇಶ’ವನ್ನು ಉದ್ದೇಶಿಸಿ ಮಾತನಾಡಿ, ‘ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹೆಚ್ಚು ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿದ್ದರಾಮಯ್ಯ ಅವರು ಜನರಿಗೆ ನೀಡಿರುವ ಭರವಸೆಗಳನ್ನು ಮರೆತಿದ್ದಾರೆ ಎಂದು ಆರೋಪಿಸಿದರು.

ಬಡವರಿಗೆ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಘೋಷಿಸಿದೆ. ಈ ಯೋಜನೆಗಳು ದೇಶದೆಲ್ಲೆಡೆ ಜನರನ್ನು ತಲುಪುತ್ತಿದ್ದರೂ ಕರ್ನಾಟಕದಲ್ಲಿ ಮಾತ್ರ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಿನ್ನೂ ಜನರಿಗೆ ತಲುಪುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ವಿಮುಖರಾಗಿದ್ದಾರೆ. ಅವರಿಗೆ ಜನ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಯಡಿಯೂರಪ್ಪನವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಕೆ.ಎಸ್‍. ಈಶ್ವರಪ್ಪ ಘೋಷಿಸಿದರು.

ಕೇಂದ್ರ ಸಚಿವ ಅನಂತ್‍ ಕುಮಾರ್, ಡಿ.ವಿ. ಸದಾನಂದ ಗೌಡ, ನಿರ್ಮಲಾ ಸೀತಾರಾಮನ್, ರಮೇಶ್ ಜಿಗಜಿಣಗಿ, ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಅಧ್ಯಕ್ಷ ಎಸ್‍.ಬಿ. ವಘೇಲಾ, ರಾಜ್ಯ ಘಟಕದ ಉಸ್ತುವಾರಿ ಮುರಳೀಧರ ರಾವ್, ಬಿಜೆಪಿ ಸಂಸದರು, ಶಾಸಕರು, ಮಾಜಿ ಸಚಿವರು, ಪಕ್ಷದ ವಿವಿಧ ಘಟಕಗಳ ಮುಖಂಡರು ಉಪಸ್ಥಿತರಿದ್ದರು.

Leave a Reply

comments

Related Articles

error: