
ಮೈಸೂರು
ಪರಿಸರ ಮಾಲಿನ್ಯಕ್ಕೆ ಅವಕಾಶ ನೀಡಬೇಡಿ, ಪರಿಸರ ಉಳಿಸುವ ಕೆಲಸ ಮಾಡಿ: ಗಂಗಾಧರ್
ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಅಂಗವಾಗಿ ಮೈಸೂರಿನ ಚಾಮರಾಜಪುರಂನಲ್ಲಿರುವ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಬುಧವಾರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಚೇರಿ ವತಿಯಿಂದ ನವೆಂಬರ್ ಒಂದರಿಂದ ಮೂವತ್ತರವರೆಗೆ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬುಧವಾರ ನಡೆದ ಜಾಥಾಗೆ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ವಾಹನಗಳ ದಟ್ಟಣೆಯಿಂದ ವಾಯುಮಾಲಿನ್ಯ ಹದಗೆಡುತ್ತಿದೆ. ಇದರೊಂದಿಗೆ ಮರಗಳನ್ನು ಕಡಿಯುತ್ತಿರುವುದರಿಂದಲೂ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇದರಿಂದಾಗಿ ಪರಿಸರ ತೀರಾ ಹದಗೆಟ್ಟಿದೆ. ಶುದ್ಧವಾದ ಗಾಳಿಯೇ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಡಲು ಗಾಳಿಯೇ ಇಲ್ಲದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾರ್ವಜನಿಕರೆಲ್ಲರು ಪರಿಸರ ಮಾಲಿನ್ಯಕ್ಕೆ ಅವಕಾಶ ಕೊಡದೇ ಪರಿಸರವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಜಾಥಾ ಆರ್ಟಿಓ ಕಚೇರಿಯಿಂದ ಆರಂಭವಾಗಿ ರಾಮಸ್ವಾಮಿ ವೃತ್ತ, ಶಾಂತಲಾ ಚಿತ್ರಮಂದಿರ, ಸಿದ್ದಪ್ಪ ವೃತ್ತ ಮಾರ್ಗವಾಗಿ ಆರ್ಟಿಓ ಕಚೇರಿ ಬಳಿ ಬಂದು ಮುಕ್ತಾಯಗೊಂಡಿತು.
ಜಾಥಾದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಚಾರ್ಲ್ಸ್, ಶಾಲಾ ವಾಹನಗಳ ಚಾಲಕರು, ಎಮಿಷನ್ ಪರೀಕ್ಷೆ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.