ಕರ್ನಾಟಕ

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಜೆಡಿಎಸ್ ಆಗ್ರಹ

ರಾಜ್ಯ(ಮಡಿಕೇರಿ) ಏ.16 :- ಉನ್ನಾವೋ ಹಾಗೂ ಕಥುವಾದಲ್ಲಿ ಅಪ್ರಾಪ್ತರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಜಾತ್ಯಾತೀತ ಜನತಾದಳದ ಪ್ರಚಾರ ಸಮಿತಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ.ಎಂ.ಗಣೇಶ್ ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯರ ಕುಟುಂಬಗಳಿಗೆ ಸೂಕ್ತ ಪರಿಹಾರ ಮತ್ತು ರಕ್ಷಣೆಯನ್ನು ನೀಡಬೇಕೆಂದು ಆಗ್ರಹಿಸಿದರು.

ದೇಶದಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಉನ್ನಾವೋ ಮತ್ತು ಕಥುವಾದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳಿಂದಾಗಿ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದರು. ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮತ್ತೆ ಇಂತಹ ಪ್ರಕರಣಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನಿರಂತರವಾಗಿ ದುರ್ಬಲರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ ದೇಶವನ್ನು ಆಳುತ್ತಿರುವ ಕೇಂದ್ರ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ ಎಂದು ಗಣೇಶ್ ಟೀಕಿಸಿದರು.

ಜಿಲ್ಲಾ ಜೆಡಿಎಸ್ ವತಿಯಿಂದ ಏ.17 ರಂದು ವಿರಾಜಪೇಟೆ ಹಾಗೂ ಕುಶಾಲನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ವಿರಾಜಪೇಟೆಯ ಗಡಿಯಾರ ಕಂಬದ ಬಳಿಯಿಂದ ತಾಲೂಕು ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಗಡಿಭಾಗ ಕೊಪ್ಪದಿಂದ ಎಸ್‍ಎಲ್‍ಎನ್ ಮೈದಾನದವರೆಗೆ `ವಿಕಾಸ ಪರ್ವ’ ಯಾತ್ರೆ ನಡೆಯಲಿದೆ. ಮುಖಂಡರಾದ ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್ ಪಾಲ್ಗೊಳ್ಳಲಿದ್ದು, ಸುಮಾರು 15 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆ.ಎಂ.ಗಣೇಶ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್ ಗೌಡ, ನಗರ ಜೆಡಿಎಸ್ ಅಧ್ಯಕ್ಷ ಬಿ.ವೈ.ರಾಜೇಶ್, ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್, ಕೃಷ್ಣಪ್ಪ ಹಾಗೂ ಮಹಿಳಾ ಘಟಕದ ಮಡಿಕೇರಿ ತಾಲೂಕು ಅಧ್ಯಕ್ಷರಾದ ಲೀಲಾ ಶೇಷಮ್ಮ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: