ಕರ್ನಾಟಕಪ್ರಮುಖ ಸುದ್ದಿ

ಮತಗಟ್ಟೆ ಕೇಂದ್ರಗಳಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸಿ: ಎನ್.ಮಂಜುಶ್ರೀ

ಮಂಡ್ಯ (ಏ.18): ಗ್ರಾಮೀಣ ಪ್ರದೇಶದಲ್ಲಿ ಹಾಗೂ ಪ್ರತಿ ಮತಗಟ್ಟೆ ಕೇಂದ್ರಗಳಲ್ಲಿ ಮತದಾನದ ಮಹತ್ವದ ಬಗ್ಗೆ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದರು.

ಇಂದು ಅವರು ಮಂಡ್ಯ ನಗರದ ಕಲಾಮಂದಿರದಲ್ಲಿ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳಿಗೆ ಮತದಾನ ಮಹತ್ವದ ಬಗ್ಗೆ ಅರಿವು ಮೂಡಿಸುವ ಸಂಬಂಧ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ಕಾರ್ಯಕ್ರಮಗಳನ್ನು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಅಧಿಕಾರಿಗಳು ಮುಂದಾಗಬೇಕು. ಮತದಾನದ ಮಹತ್ವ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವುದು ಹಾಗೂ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮೀಣಾ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಬಿಲ್ ಕಲೆಕ್ಟರ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಎಲ್ಲಾ ಸೇರಿ ಗುಂಪು ರಚನೆ ಮಾಡಿಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿಶೇಷಚೇತನರಿಗೆ, ವಯೋವೃದ್ಧರಿಗೆ ಮತದಾನ ಮಾಡಲು ಜಿಲ್ಲಾಡಳಿತ ವಿಶೇಷ ವ್ಯವಸ್ಥೆ ಮಾಡಿದ್ದು, ರ್ಯಾಂಪ್ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಕಾಯ್ದಿರಿಸಿರುವ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಮತಗಟ್ಟೆ ಕೇಂದ್ರಗಳಲ್ಲಿಯೂ ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಶರತ್ ಅವರು ಮಾತನಾಡಿ ಪ್ರತಿ ಮತಗಟ್ಟೆ ಕೇಂದ್ರಗಳಲ್ಲಿ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ಜಾಗೃತಿ (ಅವೆರ್ ನೆಸ್ ಗ್ರೂಪ್ ) ಗುಂಪು ರಚಿಸಿಕೊಂಡು ಮುಂಬರುವ ದಿನಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದ ಅವರು ನಗರ ಪ್ರದೇಶದ ನಿವಾಸಿಗಳಿಗಾಗಿ ಹಾಗೂ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಕರಪತ್ರ ವಿತರಿಸುವುದು, ಜಾಥಾಗಳನ್ನು ಆಯೋಜಿಸುವುದು, ಬೀದಿ ನಾಟಕ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಬೇಕು ಎಂದು ಅವರು ತಿಳಿಸಿದರು.

ಗ್ರಾಮೀಣಾ ಮತಗಟ್ಟೆಗಳಲ್ಲಿ ಮತದಾನದ ಹಿಂದಿನ ದಿನ ಟಾಂ ಟಾಂ ಮೂಲಕ ಮತದಾನದ ವೇಳೆ, ಮತಗಟ್ಟೆಯ ವಿವರ, ಮತದಾನದ ಸಮಯ ಬಗ್ಗೆ ಪ್ರಚಾರ ಮಾಡುವುದು ಹಾಗೂ ಮಹಿಳೆಯರಿಗೋಸ್ಕರ ವಿಶೇಷವಾಗಿ ಪಿಂಕ್ ಮತಗಟ್ಟೆ ಕೇಂದ್ರಗಳನ್ನು ಸಿದ್ಧಪಡಿಸಿರುವ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ವಿಶೇಷಚೇತನರಿಗೆ ವಿಶೇಷ ಮತಗಟ್ಟೆ ಮಾಡಿರುವ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ನೊಡೆಲ್ ಅಧಿಕಾರಿ ಹಾಗೂ ಗ್ರಾಮೀಣಾ ಮತ್ತು ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ರಾಮಕೃಷ್ಣ, ನಗರಸಭೆ ಆಯುಕ್ತರಾದ ಮಾಯಣ್ಣ, ಮಂಡ್ಯ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ನಾಗರಾಜ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.(ಎನ್.ಬಿ)

ಕಾರ್ಯಗಾರದಲ್ಲಿ ಪಾಲ್ಗೊಂಡ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು.

Leave a Reply

comments

Related Articles

error: