ಮೈಸೂರು

ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬನ ಆದ್ಯ ಕರ್ತವ್ಯ: ಡಾ.ಎ.ಸುಬ್ರಮಣ್ಯೇಶ್ವರ ರಾವ್

ಮೈಸೂರು,ಏ.23-ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬನ ಆದ್ಯ ಕರ್ತವ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್ ಹೇಳಿದರು.

ಮೈಸೂರು ನಗರ ಸಂಚಾರ ಪೊಲೀಸ್ ವತಿಯಿಂದ ಮೈಸೂರು ಜಿಲ್ಲೆ ಪೊಲೀಸ್ ಅಧೀಕ್ಷಕರ ಕಚೇರಿಯ ಆವರಣದಲ್ಲಿರುವ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಮನೆಯಿಂದ ಬೈಕ್, ಕಾರುಗಳನ್ನು ತೆಗೆದುಕೊಂಡು ಹೋಗುವಾಗ ಪೋಷಕರು ತಪ್ಪದೇ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ತಿಳಿಹೇಳಬೇಕು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಲಾಯಿಸುವವರು ಸೀಟ್ ಬೆಲ್ಟ್ ಧರಿಸಬೇಕು. ಅತಿ ವೇಗದಲ್ಲಿ ವಾಹನ ಚಾಲನೆ ಮಾಡಬಾರದು. ಮದ್ಯಸೇವಿಸಿ ವಾಹನ ಚಲಾಯಿಸಬಾರದು. ಇದರಿಂದ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದರು.

ಇನ್ನು ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ನಮಗೇಕೆ ಎಂದು ನಿರ್ಲಕ್ಷ್ಯ ಮಾಡದೆ ತಕ್ಷಣ ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆಯಬೇಕು. ಮೈಸೂರಿನಲ್ಲಿ ವರ್ಷಕ್ಕೆ 100 ಮಂದಿ ಅಪಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಆದರೆ ಕೊಲೆ, ಕಳ್ಳತನ, ಹಲ್ಲೆ ಪ್ರಕರಣಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಅಪಘಾತ ಪ್ರಕರಣಗಳ ಬಗ್ಗೆಯೂ ಚರ್ಚಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ವಿಷ್ಣುವರ್ಧನ್, ಮಹಾಲಿಂಗು, ನರತಜ್ಞ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು. (ಕೆ.ಎಸ್, ಎಂ.ಎನ್)

Leave a Reply

comments

Related Articles

error: