ಮೈಸೂರು

ವಿಕಲಚೇತನರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ : ರಂದೀಪ್ ಕರೆ

doddakere-webವಿಕಲಚೇತನರನ್ನು ಸಬಲೀಕರಣಗೊಳಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಹತ್ತು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ವಿಶೇಷ ಚೇತನರು ಅವುಗಳ ಸದುಪಯೋಗ ಪಡೆದುಕೊಂಡು ಸಾಧನೆಯ ಶಿಖರವೇರಬೇಕು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಕರೆ ನೀಡಿದರು.

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲೆಯಲ್ಲಿನ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿನ ಕಾಳಿಂಗರಾವ್ ಗಾನಮಂಟಪದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ ಪ್ರಶಸ್ತಿಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು, ವಿಕಲಚೇತನರು ನಮ್ಮನಿಮ್ಮಂತೆ ಸಾಮಾನ್ಯರಲ್ಲದಿದ್ದರೂ ಅವರಲ್ಲೂ ಅಗಾಧ ಪ್ರತಿಭೆ ಇರುತ್ತದೆ. ಅವುಗಳನ್ನು ಹೊರತರಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಸರ್ಕಾರ ತನ್ನ ಆಯವ್ಯಯದಲ್ಲಿ ವಿಕಲಚೇತನರ ಅಭಿವೃದ್ಧಿ ಹಾಗೂ ಸಬಲೀಕರಣಕ್ಕೆ ಶೇ.3ರಷ್ಟು ಅನುದಾನವನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯಗಳು ಒಬ್ಬರಿಂದ ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು. ಸರ್ಕಾರದಿಂದ ಜಾರಿಯಾಗುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಮ್ಯುನಿಟಿ ಹಾಗೂ ವೈಯಕ್ತಿಕವಾಗಿ ಬಿಡುಗಡೆಯಾಗುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎಲ್ಲರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಬಳಿಕ ಮಾತನಾಡಿದ ಮೈಲಾಕ್ ಅಧ್ಯಕ್ಷ, ಹೆಚ್.ಎ.ವೆಂಕಟೇಶ್, ತಾವು ಮಾಡಿಲ್ಲದ ತಪ್ಪಿಗೆ ವಿಕಲಚೇತನರಾಗಿ ಹುಟ್ಟುವ ಮಕ್ಕಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳೆಲ್ಲವನ್ನು ಬಗೆಹರಿಸಿ ಮುಖ್ಯವಾಹಿನಿಗೆ ಕರೆತರುವ ಕೆಲಸವನ್ನು ಅಧಿಕಾರಿ ವರ್ಗ ಮಾಡಬೇಕು. ಕೇವಲ ಸಂಬಳಕ್ಕೆ ಕೆಲಸ ಮಾಡದೆ, ಸೇವಾ ಮನೋಭಾವದಿಂದ ಕೆಲಸ ಮಾಡಿದರೆ ವಿಕಲಚೇತನರು ವಿಶ್ವಚೇತನರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಪ್ರತಿಯೊಂದು ಮಗು ಅಕ್ಷರದಿಂದ, ಪೌಷ್ಠಿಕ ಆಹಾರದಿಂದ, ವಂಚಿತರಾಗಬಾರದು ಎಂದರಲ್ಲದೇ  ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿಗಳನ್ನು ನಡೆಸಲಾಗುತ್ತಿದೆ. ಸರ್ಕಾರದ ಈ ಕಲ್ಪನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.

ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿವಿಧ ಶಾಲೆಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಸ್‍ಪಿಐ ಸಂಸ್ಥೆ ವತಿಯಿಂದ ಬಹುಮಾನ ವಿತರಿಸಲಾಯಿತು. ಜತೆಗೆ 2017ರ ಬ್ರೈಲ್ ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಲಾಯಿತು. ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ರಾಧ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ನಾಗೇಶ್ ಬಿಲ್ವಾ, ಎಲ್‍ಪಿಐ ಸಂಸ್ಥೆಯ ಅಧ್ಯಕ್ಷ ರಘು, ವಸ್ತುಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಹಣಾಧಿಕಾರಿ ಶಶಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪದ್ಮ, ಶ್ರೀಧರ್ ದೀಕ್ಷಿತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: