ಕರ್ನಾಟಕ

ಮಂಡ್ಯ ಜಿಲ್ಲೆ: 8 ಗ್ರಾಮ ಪಂಚಾಯತಿ ಉಪ ಚುನಾವಣೆಗಳ ವೇಳಾಪಟ್ಟಿ ಪ್ರಕಟ

ಮಂಡ್ಯ (ಮೇ 29): ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ 8 ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 8 ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಉಪ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮಂಡ್ಯ ಜಿಲ್ಲಾಧಿಕಾರಿಗಳು ಮೇ 30 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಜೂನ್ 2 ರಂದು ಕೊನೆಯ ದಿನವಾಗಿದೆ. ಜೂನ್ 4 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಜೂನ್ 6 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಜೂನ್ 14 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಡೆಯ ವರೆಗೆ ಮತದಾನ ನಡೆಯಲಿದ್ದು, ಜೂನ್ 17 ರಂದು ಬೆಳಿಗ್ಗೆ 8 ಗಂಟೆಗೆ ಸಂಬಂಧಿಸಿದ ತಾಲ್ಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.

ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ವಿವರ:

  • ಮದ್ದೂರು ತಾಲ್ಲೂಕಿನ ಬೆಕ್ಕಳಲೆ ಗ್ರಾಮ ಪಂಚಾಯಿತಿಯ ಕುರಿಹುಚ್ಚನಕೊಪ್ಪಲು ಮತ್ತು ನಗರಕೆರೆ ಗ್ರಾಮ ಪಂಚಾಯಿತಿಯ ಮಾಲಗಾರನಹಳ್ಳಿ.
  • ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿ ಗ್ರಾಮ ಪಂಚಾಯಿತಿಯ ಬ್ರಹ್ಮಪುರ ಮತ್ತು ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಕೆ.ಶೆಟ್ಟಹಳ್ಳಿ.
  • ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮ ಪಂಚಾಯಿತಿಯ ಚಿಕ್ಕಾಡೆ ಮತ್ತು ಅರಳಕುಪ್ಪೆ ಗ್ರಾಮ ಪಂಚಾಯಿತಿಯ ಅರಳಕುಪ್ಪೆ.
  • ಕೆ.ಆರ್.ಪೇಟೆ ತಾಲ್ಲೂಕಿನ ಆನೆಗೊಳ ಗ್ರಾಮ ಪಂಚಾಯಿತಿಯ ಅಂಚೆಬೀರನಹಳ್ಳಿ ಮತ್ತು ಐಕನಹಳ್ಳಿ ಗ್ರಾಮ ಪಂಚಾಯಿತಿಯ ಮಂಡಲೀಕನಹಳ್ಳಿ.

ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ದಿನಾಂಕ: 30-5-2018 ರಿಂದ ದಿನಾಂಕ:17-6-2018 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.

ಉಪ ಚುನಾವಣೆಗಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಬ್ಬರಂತೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಚುನಾವಣಾಧಿಕಾರಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಛೇರಿಯಲ್ಲಿ ದಿನಾಂಕ:30-5-2018 ರಿಂದ 2-6-2018 ರವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸುವರು. ಚುನಾವಣೆಗಳ ಮತಪತ್ರಗಳಲ್ಲಿ ಓಔಖಿಂ ಅವಕಾಶ ಇರುವುದಿಲ್ಲ.

ಉಪ ಚುನಾವಣೆಯನ್ನು ಶಾಂತಿಯುತವಾಗಿ, ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಸಾರ್ವಜನಿಕರು, ಅಭ್ಯರ್ಥಿಗಳು ಹಾಗೂ ಮತದಾರರು ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ತಹಶೀಲ್ದಾರರನ್ನು ಸಂಪರ್ಕಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: