ಮೈಸೂರು

ಉಚಿತ ಬಸ್ ಪಾಸ್ ವಿತರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜು.20:- ಉಚಿತ ಬಸ್ ಪಾಸ್ ವಿತರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಎಸ್.ಎಫ್ ಐ ಹಲವು ವರ್ಷಗಳಿಂದ ಹೋರಾಟ ಮಾಡುತ್ತಾ ಬರುತ್ತಿದ್ದು, ಹೋರಾಟದ ಪ್ರತಿಫಲವಾಗಿ ಹಿಂದಿನ ರಾಜ್ಯ ಸರ್ಕಾರ ಬಜೆಟ್ ಮಂಡನೆಯ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿತ್ತು. ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಮ್ಮಿಶ್ರ ಸರ್ಕಾರ ಉಚಿತ ಬಸ್ ಪಾಸ್ ನೀಡುವಲ್ಲಿ ಮೀನ-ಮೇಷ ಎಣಿಸುತ್ತಿದೆ. ಶಾಲಾ ಕಾಲೇಜುಗಳು ಪ್ರಾರಂಭವಾಗಿ ಎರಡು ತಿಂಗಳು ಕಳೆದಿದೆ. ಜವಾಬ್ದಾರಿಯುತ ಸರ್ಕಾರದ ಸಚಿವರುಗಳು ಗಳಿಗೆಗೊಂದು, ದಿನಕ್ಕೊಂದು ಹೇಳಿಕೆ ನೀಡಿ ರಾಜ್ಯದ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ನುಣುಚಿಕೊಳ್ಳುವುದನ್ನು ಕೈಬಿಟ್ಟು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವಲ್ಲಿ ಮುಂದಾಗಬೇಕು. ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸರ್ಕಾರ ಪ್ರಯತ್ನಿಸಿದರೆ ತೀವ್ರ ಸ್ವರೂಪದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಎಸ್ ಎಫ್ ಐ ರಾಜ್ಯಾಧ್ಯಕ್ಷ ಅಂಬರೀಷ್, ವಸಂತಕುಮಾರ್, ಯತೀಶ್, ಮಧುಸೂದನ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: