ಮೈಸೂರು

ಸಂಶೋಧನೆಯ ಗುಣಮಟ್ಟ ಹೆಚ್ಚಿಸುವ ಅಗತ್ಯವಿದೆ : ಪ್ರೊ.ಕೆ.ಎಸ್.ರಂಗಪ್ಪ

ಸಂಶೋಧನೆಯ ಗುಣಮಟ್ಟ ಪಾಶ್ಚಾತ್ಯ ದೇಶಗಳಲ್ಲಿ ಹೆಚ್ಚಿದ್ದು, ನಮ್ಮ ದೇಶದಲ್ಲಿ ಪಿ.ಹೆಚ್.ಡಿ.ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯ  ಗಾಂಧಿ ಅಧ್ಯಯನ ಕೇಂದ್ರ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಾನಸಗಂಗೋತ್ರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಸಹಯೋಗದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ರಾಣಿಬಹದ್ದೂರ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಸಮಾಜ ವಿಜ್ಞಾನ ಸಂಶೋಧನಾ ವಿದ್ಯಾರ್ಥಿಗಳಿಗೆ, ಸಂಶೋಧನಾ ವಿಧಾನ ಕುರಿತ ಒಂದು ದಿನದ ಕಾರ್ಯಗಾರವನ್ನು ಪ್ರೊ.ಕೆ.ಎಸ್.ರಂಗಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಹೊರ ದೇಶಗಳಳಿಗೆ ಹೋಲಿಸಿದರೆ ಇಲ್ಲಿ  ಸಂಶೋಧನೆಯ ಗುಣಮಟ್ಟ ಕುಸಿಯುತ್ತಿದೆ. ಇಂದಿನ ವಿದ್ಯಾರ್ಥಿಗಳು ಪಿ.ಹೆಚ್.ಡಿ ಪ್ರಬಂಧಗಳಲ್ಲಿ ನಕಲು ಮಾಡುವುದು ಕಂಡು ಬರುತ್ತಿದೆ. ಸಂಶೋಧಕರು ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಹಾಗೂ ಜ್ಞಾನ ಹೆಚ್ಚಿಸಿಕೊಳ್ಳುವ ಜಿಜ್ಞಾಸೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಂಶೋಧನಾ ವಿದ್ಯಾರ್ಥಿಗಳು ತಜ್ಞರಿಂದ ಹೆಚ್ಚಿನ ಸಲಹೆಗಳನ್ನು ಪಡೆದುಕೊಳ್ಳಬೇಕು. ಮತ್ತು ಸಾದರ ಪಡಿಸುವ ವಿಷಯಗಳು ಪ್ರಾಮುಖ್ಯತೆ ಹೊಂದಿರುವಂತೆ ನೋಡಿಕೊಳ್ಳಬೇಕು. ಇದೀಗ ವೆಬ್ ಸೈಟ್‍ಗಳಲ್ಲಿ ಅಂಗೀಕರಿಸಿದ ಪ್ರಬಂಧಗಳನ್ನು ಅಪ್‍ಲೋಡ್ ಮಾಡುವ ಪದ್ಧತಿ ಜಾರಿಗೆ ಬಂದಿರುವುದರಿಂದ ನಕಲು ಪ್ರಬಂಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ತಿಳಿಸಿದರು.

ಮೈಸೂರು ವಿವಿ ನಿವೃತ್ತ ಸಮಾಜಶಾಸ್ತ್ರ ಪ್ರಾಧ್ಯಾಪಕಿ ಪ್ರೊ.ಆರ್.ಇಂದಿರಾ ವಿಶೇಷ ಉಪನ್ಯಾಸ ನೀಡಿದರು.  70ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ  ಮೈಸೂರು ವಿವಿ ಗಾಂಧಿ ಭವನದ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಎಂ.ರುದ್ರಯ್ಯ,  ಆಡಳಿತಾಧಿಕಾರಿ ಪ್ರೊ.ಸಿ.ರಾಮಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: