
ಮೈಸೂರು
ಪ್ರೋತ್ಸಾಹ ಧನ ಬಿಡುಗಡೆ ಮಾಡದಿದ್ದಲ್ಲಿ ವಿಧಾನ ಸೌಧಕ್ಕೆ ಮುತ್ತಿಗೆ ಎಚ್ಚರಿಕೆ
ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ.ಕಾಟೂರು ಹೇಳಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲನೇ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಪಿ.ಯು.ಸಿ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಎಸ್.ಸಿ/ಎಸ್.ಟಿ. ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲೆಂದು ಸರ್ಕಾರ ಬಹುಮಾನ ರೂಪದಲ್ಲಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಿ, ಇದುವರೆವಿಗೂ ರಾಜ್ಯದಲ್ಲಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮತ್ತು ಅಧೀನ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿದೆ. ಈಗಾಗಲೇ ಬಜೆಟ್ ನಲ್ಲಿ ಈ ವರ್ಗಗಳ ಅಭಿವೃದ್ದಿಗಾಗಿ 19 ಸಾವಿರ ಕೋಟಿ ಹಣ ಮೀಸಲಿದೆ. ಪ್ರೋತ್ಸಾಹ ಧನ ನೀಡಲು ಆದೇಶವಿದ್ದರೂ ಸಹ ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿಳಂಬವಾಗಿದೆ. ಇದಕ್ಕೆ ಕಾರಣರಾದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಅಧಿನಿಯಮ 2013 ರ ಪ್ರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಒಂದೇ ಕಂತಿನಲ್ಲಿ 15 ದಿನಗಳೊಳಗೆ ಪ್ರೋತ್ಸಾಹ ಧನವನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು. ಇಲ್ಲದಿದ್ದರೆ ವಿದ್ಯಾರ್ಥಿಗಳ ಜೊತೆಗೂಡಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಶಿವಕುಮಾರಸ್ವಾಮಿ, ಚೆನ್ನನಾಯಕ, ಮಯೂರನಾಯಕ ಮತ್ತು ಸುರೇಶ್ ನಾಯಕ ಹಾಜರಿದ್ದರು.