
ಮೈಸೂರು
ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂಬ ಆರೋಪ ಸರಿಯಲ್ಲ: ದೇವೇಗೌಡ
ಜೆಡಿಎಸ್ ಸದಸ್ಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿ ಅವರ ಪರ ಬ್ಯಾಟ್ ಬೀಸಿದ್ದಾರೆ.
ಭೇಟಿಗೆ ಪ್ರಧಾನಿ ನರೇಂದ್ರ ಮೋದಿ ಅವಕಾಶ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರುತ್ತಿರುವುದು ಸರಿಯಲ್ಲ. ಸಿಎಂ ಹಲವು ಬಾರಿ ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ದೂರುವುದು ಸರಿಯಲ್ಲ. ತಮಿಳುನಾಡು ಪರಿಸ್ಥಿತಿಯೇ ಬೇರೆ ರೀತಿ ಇದೆ. ಹಾಗಾಗಿ ತಮಿಳುನಾಡಿನ ಸಿಎಂಗೆ ಭೇಟಿಗೆ ಅವಕಾಶ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವುದು ತಪ್ಪು ಎಂದು ದೇವೇಗೌಡರು ಪ್ರತಿಪಾದಿಸಿದ್ದಾರೆ. ಜೆಡಿಎಸ್ ಸದಸ್ಯ ಅಭಿಯಾನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ.
ನಮಗೆ ಗೆಲುವು ಖಚಿತ: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ಗೆ ನಮ್ಮ ಬೆಂಬಲವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ನಂಜನಗೂಡಿನಲ್ಲಿ ಹೇಳಿದ್ದಾರೆ. ಶ್ರೀನಿವಾಸ್ ಪ್ರಸಾದ್ ಬಿಜೆಪಿಗೆ ಸೇರುವುದರ ಬಗ್ಗೆ ಬಿಎಸ್ವೈ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಈ ಹೇಳಿಕೆ ನೀಡಿದ್ದಾರೆ.
ನಂಜನಗೂಡು ಉಪ ಚುನಾವಣೆಯಲ್ಲಿ ನಮಗೆ ಗೆಲುವು ಖಚಿತ. ನಮ್ಮ ಅಭ್ಯರ್ಥಿಯ ಹೆಸರನ್ನು ಕೆಲವೇ ದಿನಗಳಲ್ಲಿ ಬಹಿರಂಗಗೊಳಿಸಲಾಗುವುದು ಎಂದು ಹೇಳಿದ್ದಾರೆ.