ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್‌ ಗೊಂದಲ ಬಗೆಹರಿಸಲು ವೇಣುಗೋಪಾಲ್‍ರಿಂದ ತುರ್ತು ಸಭೆಯ ಬುಲಾವ್!

ಬೆಂಗಳೂರು (ಆ.29): ‘ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ. ನನಗೆ ಭರವಸೆ ಇದೆ, ಜನರು ನನಗೆ ಆಶೀರ್ವಾದ ಮಾಡುತ್ತಾರೆ’ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ತುರ್ತು ಸಭೆ ಕರೆದಿದ್ದಾರೆ.

ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಪಕ್ಷ ಹೇಳಿದೆ. ಆದರೆ, ನಿಜವಾಗಿಯೂ ನಡೆಯುವ ಚರ್ಚೆ ಸಿದ್ದರಾಮಯ್ಯ ಅವರ ಹೇಳಿಕೆ ಮತ್ತು ಅದಕ್ಕೆ ಕಾಂಗ್ರೆಸ್ ಶಾಸಕರು, ಸಚಿವರು ನೀಡುತ್ತಿರುವ ಪ್ರತಿಕ್ರಿಯೆಗಳು ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕರ ಮಾತಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಅವರು ಕೆ.ಸಿ.ವೇಣುಗೋಪಾಲ್‌ ಅವರಿಗೆ ತಿಳಿಸಿದ್ದಾರೆ. ಇದರಿಂದಾಗಿ ಪಕ್ಷದ ನಾಯಕರ ಸಭೆಯನ್ನು ವೇಣುಗೋಪಾಲ್ ಕರೆದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸೆ.1 ಮತ್ತು 2ರಂದು ಬೆಂಗಳೂರಿನಲ್ಲಿ ಪಕ್ಷದ ನಾಯಕರ ಸಭೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಸೆ.3ರಿಂದ ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಅದಕ್ಕೂ ಮೊದಲು ಈ ಸಭೆ ನಡೆಯಲಿದೆ.

ಆಗಸ್ಟ್ 30ಕ್ಕೆ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನವಾಗಲಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಿರಿಯ ನಾಯಕರು ಪಕ್ಷದ ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮತ್ತೊಂದು ಕಡೆ ನಿಗಮ-ಮಂಡಳಿ ನೇಮಕಾತಿ ಆಗಿಲ್ಲ ಎಂದು ಶಾಸಕರು ಅಸಮಾಧಾನಗೊಂಡಿದ್ದಾರೆ.

ಕೆ.ಸಿ.ವೇಣುಗೋಪಾಲ್ ಅವರು ಆ.31ರಂದು ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆ.1 ಮತ್ತು 2ರಂದು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿ, ಸಂಪುಟ ರಚನೆ, ನಿಗಮ-ಮಂಡಳಿ ನೇಮಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. (ಎನ್.ಬಿ)

Leave a Reply

comments

Related Articles

error: