ಕರ್ನಾಟಕಪ್ರಮುಖ ಸುದ್ದಿ

ಹಾಲಿನ ದರ ವಿಷಯ: ರಾಜ್ಯ ಸರ್ಕಾರ vs ಕೆಎಂಎಫ್?

ಬೆಂಗಳೂರು (ಸೆ.5): ಹಾಲಿನ ದರ ಏರಿಕೆ ಮಾಡುವ ಕುರಿತು ಕೆಎಂಎಫ್‌ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದ್ದು, ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ನಾಗರಿಕರಿಗೆ ಹಾಲನ್ನು ದುಬಾರಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಅವರು, ಹಾಲಿನ ದರ ಏರಿಕೆ ಮಾಡುವ ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಮಾಡುವ ಕುರಿತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ -ಕೆಎಂಎಫ್‌ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಿದೆ ಎನ್ನಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಪಶು ಆಹಾರದ ಬೆಲೆಗಳ ಕುರಿತು ಸಮಾಲೋಚಿಸಲಾಗುತ್ತದೆ. ಆದರೆ ಈ ಹಂತದಲ್ಲಿ ಹಾಲಿನ ದರ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ಹಾಗೆಯೇ ಆ ಕುರಿತು ಪ್ರಾರಂಭಿಕ ಹಂತದ ಚರ್ಚೆಯೂ ನಡೆದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಹಾಲಿನ ದರ ಏರಿಕೆ ಇಲ್ಲ ಎಂದು ಸಚಿವರು ಹೇಳಿದ್ದರೂ ಕೆಎಂಎಫ್‌ ಮಾತ್ರ ಪ್ರತಿ ಲೀಟರ್‌ಗೆ ಎರಡು ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಈ ಸಂಬಂಧ ಮಂಡಳದ ಮುಂದಿನ ಸಭೆಯಲ್ಲಿ ಚರ್ಚಿಸಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ರಾಕೇಶ್‌ ಸಿಂಗ್‌ ತಿಳಿಸಿದ್ದಾರೆ.

ಹಾಲಿನ ದರ ಏರಿಕೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಪ್ರತೀ ಲೀಟರ್‌ ಹಾಲಿನ ದರ ಎರಡು ರು.ಗಳಂತೆ ಏರಿಕೆ ಮಾಡಲು ಸರ್ಕಾರ ಅನುಮತಿ ನೀಡಿದರೆ, ಅದರಲ್ಲಿ ರೈತರಿಗೆ ಲೀಟರ್‌ಗೆ 1.15 ರಿಂದ 1.50 ರೂ. ನೀಡಲಾಗುವುದು. ಉಳಿದ 50 ಪೈಸೆ ಒಕ್ಕೂಟಕ್ಕೆ ಸಿಗಲಿದೆ. ಶೀಘ್ರವೇ ಮಹಾಮಂಡಳಿ ಸಭೆ ನಡೆಸಿ ಈ ಕುರಿತು ನಿರ್ಧಾರ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಇಂಧನ, ಪ್ಯಾಕಿಂಗ್‌, ವಿದ್ಯುತ್‌ ದರಗಳು ಕೂಡ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ. ಈ ಬಗ್ಗೆ ಕೆಎಂಎಫ್‌ ಸಭೆಯಲ್ಲಿ ತೀರ್ಮಾನ ಕೈಗೊಂಡು, ನಂತರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಮಹಾಮಂಡಳಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. (ಎನ್.ಬಿ)

Leave a Reply

comments

Related Articles

error: