ಪ್ರಮುಖ ಸುದ್ದಿ

ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪ್ರತಿಭಟನೆ

ರಾಜ್ಯ(ಮಡಿಕೇರಿ)ಸೆ. 19:- ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಸ್ಥಾಪಿತವಾಗಿರುವ ಪುನರ್ವಸತಿ ಕೇಂದ್ರದಲ್ಲಿ ಕೆಲವರು ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ,  ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮತ್ತು ತಾಲೂಕು ಕಛೇರಿ ಸಿಬ್ಬಂದಿಗಳು ಬುಧವಾರ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.

ಕರ್ತವ್ಯ ನಿರತ ತಹಶೀಲ್ದಾರರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಸುಮಾರು 40 ರಿಂದ 50 ಜನರ ಗುಂಪು ದೈಹಿಕ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನೌಕರರ ವಲಯದಲ್ಲಿ ಆತಂಕ ಮೂಡಿಸಿದೆ. ಇದೇ ಸಂದರ್ಭ ತಹಶೀಲ್ದಾರ್ ಅವರ ತಲೆಗೆ ಕಲ್ಲಿನಿಂದ ಹೊಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ರಾಜ್ಯ ಸರಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಒತ್ತಾಯಿಸಿದ್ದಾರೆ.

ಪ್ರತಿಭಟನೆ ಸಂಧರ್ಭ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಕಛೇರಿಯ ಅರುಣ್ ಕುಮಾರ್ ಸೇರಿದಂತೆ ಎಲ್ಲಾ ಇಲಾಖೆಗಳ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವವರೆಗೆ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಜವರೇಗೌಡ ಪ್ರತಿಭಟನಾಕಾರರನ್ನು ಮನವೊಲಿಸಿದರು. ಪೋಲೀಸರು ಈಗಾಗಲೇ ಮೊಕದ್ದಮೆ ದಾಖಲಿಸಿದ್ದಾರೆ. ತನಿಖೆಗೆಗೆ ಒಂದಷ್ಟು ಸಮಯವನ್ನು ಕೊಡಬೇಕು. ನೌಕರರು ತಮ್ಮ ಕೆಲಸಕ್ಕೆ ತೆರಳಿ ಎಂದು ಸೂಚಿಸಿದರು. ತನಿಖೆಯ ನಂತರ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವ ಭರವಸೆಯನ್ನು ಡಿವೈಎಸ್‍ಪಿ ಮುರುಳೀಧರ್ ನೀಡಿದರು. ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಮುಂದಿನ 24ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪ್ರಸನ್ನ ಹೇಳಿದರು.

ಮಧ್ಯಾಹ್ನದ ತನಕ ಕಛೇರಿಯಲ್ಲಿ ಸಿಬ್ಬಂದಿಗಳು ಇಲ್ಲದ ಕಾರಣ ಕೆಲಸ ನಿಮಿತ್ತ ತಾಲೂಕಿನ ವಿವಿಧೆಡೆಗಳಿಂದ ಬಂದಿದ್ದ ಸಾರ್ವಜನಿಕರು ಪರದಾಡಿದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: