ಮೈಸೂರು

ಕನ್ನಡದಲ್ಲೂ ನೀಟ್ ಬರೆಯಲು ಅವಕಾಶ ಕಲ್ಪಿಸಿ: ಕರವೇ ಪ್ರತಿಭಟನೆ

ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮೈಸೂರು ಜಿಲ್ಲಾ ಘಟಕದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತದಲ್ಲಿ ಎಲ್ಲ ಭಾಷೆಗಳಿಗೂ ಸಮಾನ ಗೌರವ ಮತ್ತು ಎಲ್ಲಾ ರಾಜ್ಯಗಳಿಗೂ ಸಮಾನ ಸ್ಥಾನಮಾನ ನೀಡಬೇಕು. ಹಿಂದಿ, ಮರಾಠಿ, ಗುಜರಾತಿ, ತಮಿಳು, ತೆಲುಗು ಭಾಷೆಗಳಿಗೆ ಅವಕಾಶ ನೀಡಲಾಗಿದ್ದು ಕನ್ನಡವನ್ನು ಈ ಪಟ್ಟಿಯಲ್ಲಿ ಸೇರಿಸಿಲ್ಲ. ನಿರಂತರವಾಗಿ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬರಲಾಗಿದೆ ಎಂದು ಆರೋಪಿಸಿದರು.

ಇದೇ ಸಂದರ್ಭ ಕನ್ನಡದಲ್ಲಿಯೂ ನೀಟ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಯವರ ಮೂಲಕ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಲೋಕೇಶ್, ಹೇಮಂತ್ ಗೌಡ, ರಘು, ಜಾಫರ್ ಶರೀಫ್ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: