ಪ್ರಮುಖ ಸುದ್ದಿ

ಕಾವೇರಿ ತುಲಾ ಸಂಕ್ರಮಣ ಜಾತ್ರೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ

ರಾಜ್ಯ(ಮಡಿಕೇರಿ )ಅ.2 :-ಇದೇ ಅಕ್ಟೋಬರ್, 17 ರಂದು ಜರುಗುವ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೋಬರ್, 17 ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ಪುಣ್ಯಕಾಲ ಜರುಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಕಾರಿಗಳು ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಬಸ್ ಕಲ್ಪಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.  ಮಡಿಕೇರಿಯಿಂದ ತಲಕಾವೇರಿವರೆಗೆ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಬದಿ ಕಾಡು ಕಡಿಯುವುದು, ಸುಣ್ಣ ಬಣ್ಣ ಬಳಿಯುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರಿಗೆ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು.

ಭಾಗಮಂಡಲದಿಂದ ತಲಕಾವೇರಿ ವರೆಗೆ ಬೀದಿ ದೀಪ ಅಳವಡಿಸುವುದು, ಹಾಗೆಯೇ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಇಲಾಖೆ ಎಂಜಿನಿಯರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ತಲಕಾವೇರಿ ಕುಂಡಿಕೆ ಹಾಗೂ ಕೊಳದ ಬಳಿ ನೂಕುನುಗ್ಗಲು ಉಂಟಾಗದಂತೆ ಅಗತ್ಯ ಬ್ಯಾರಿಕೇಡ್‍ಗಳನ್ನು ಅಳವಡಿಸಬೇಕು. ಗಣ್ಯ ವ್ಯಕ್ತಿಗಳು, ಅತಿಥಿಗಳು, ಒಬಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು. ತುರ್ತು ಸಂದರ್ಭದಲ್ಲಿ ನಿರ್ವಹಿಸಲು ಅಗ್ನಿ ಶಾಮಕ ದಳ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು.

ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯುವುದು. ಆಂಬ್ಯುಲೆನ್ಸ್ ಕಲ್ಪಿಸುವುದು, ನುರಿತ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಜಾತ್ರೆ ಸಂದರ್ಭದಲ್ಲಿಯೂ ಪ್ಲಾಸ್ಟಿಕ್‍ನ್ನು ಬಳಸಬಾರದು, ಈ ಬಗ್ಗೆ ಮಾಹಿತಿ ನೀಡಬೇಕು. ಅಗತ್ಯವಿರುವ ಕಡೆ ಡಸ್ಟ್‍ಬಿನ್‍ಗಳನ್ನು ಇಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ಆಹ್ವಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.   ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಮಾತನಾಡಿ ತಲಕಾವೇರಿ, ಭಾಗಮಂಡಲಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಕಲ್ಪಿಸುವುದು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಭಾಗಮಂಡಲ ಗ್ರಾ.ಪಂ.ಪಿಡಿಓಗೆ ಸೂಚಿಸಿದರು.

ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರ ಕಾರ್ಮಿಕರನ್ನು ನಿಯೋಜಿಸಲು ನಗರಸಭೆ ಪೌರಾಯುಕ್ತರಿಗೆ ಪತ್ರ ಬರೆಯುವಂತೆ ತಾ.ಪಂ. ಇಒಗೆ ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತುಲಾ ಸಂಕ್ರಮಣ ಜಾತ್ರೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ವಾಹನ ಸುಗಮ ಸಂಚಾರಕ್ಕೆ ಅಗತ್ಯ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಭಾಗಮಂಡಲ-ಭಗಂಡೇಶ್ವರ-ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಅವರು ಮಾತನಾಡಿ ಅರ್ಚಕರು ಮತ್ತು ತಕ್ಕ ಮುಖ್ಯಸ್ಥರು ಕುಂಡಿಕೆ ಬಳಿ ಇರುತ್ತಾರೆ. ಉಳಿದಂತೆ ಗಣ್ಯರು, ಪತ್ರಕರ್ತರು ಒಂದು ಕಡೆ ಇರುತ್ತಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತುಲಾ ಸಂಕ್ರಮಣ ಒಂದು ತಿಂಗಳವರೆಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅವರು ಕೋರಿದರು.

ಜಾತ್ರೆ ಸಂದರ್ಭದಲ್ಲಿ ಶಾಮಿಯಾನ, ಧ್ವನಿವರ್ಧಕ ವ್ಯವಸ್ಥೆ, ತೀರ್ಥೋದ್ಭವ ದಿನದಂದು ಭಕ್ತಾಧಿಗಳಿಗೆ ನೇರ ವೀಕ್ಷಣೆಗೆ ಎಲ್.ಸಿ.ಡಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾತನಾಡಿ ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.

ಸಣ್ಣುವಂಡ ಕಾವೇರಪ್ಪ ಅವರು ಮಾತನಾಡಿ ತುಲಾ ಸಂಕ್ರಮಣ ಜಾತ್ರೆ ನಂತರ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕೆ.ಟಿ.ದರ್ಶನ್ ಅವರು ಮಾಹಿತಿ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಅನುಕೂಲಕ್ಕಾಗಿ ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಗಿರೀಶ್ ಅವರು ಮಾಹಿತಿ ನೀಡಿದರು.

ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಸೆಸ್ಕ್ ಎಇಇ ದೇವಯ್ಯ, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಳವಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಾಲ್ಟರ್ ಡಿಮೆಲ್ಲೋ, ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಇಒ ಜಗದೀಶ್ ಕುಮಾರ್ ಇತರರು ಹಲವು ಮಾಹಿತಿ ನೀಡಿದರು.

ತೀರ್ಥೋದ್ಭವ ಅ.17 ಸಂಜೆ 6.43ಕ್ಕೆ

ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ 2018ರ ಅಕ್ಟೋಬರ್ ಮಾಹೆಯಲ್ಲಿ ಶ್ರೀ ಕಾವೇರಿ ತುಲಾಸಂಕ್ರಮಣ ಜಾತ್ರೆ ನಡೆಯಲಿದ್ದು, ಅ.5 ರಂದು ಬೆಳಗ್ಗೆ 10.15 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು ಬೆಳಗ್ಗೆ 10.25 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ.15 ರಂದ ಮಧ್ಯಾಹ್ನ 3 ಗಂಟೆ 37 ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು. ಅ.17 ರ ಸಂಜೆ 6.43 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ “ಶ್ರೀ ಮೂಲ ಕಾವೇರಿ ತೀರ್ಥೋದ್ಭವ ಜರುಗಲಿದೆ. ಶ್ರೀಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಆಗಮಿಸಿ ಶ್ರೀ ಕಾವೇರಿ ಮಾತೆಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯ ವ್ಯವಸ್ಥಾಪನಾ ಸಮಿತಿ ಕೋರಿದೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: