ಕರ್ನಾಟಕಪ್ರಮುಖ ಸುದ್ದಿ

ಉಗ್ರಪ್ಪ, ಆನಂದ್ ನ್ಯಾಮೇಗೌಡ, ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು (ಅ.16): ನಾಮಪತ್ರ ಸಲ್ಲಿಸಲು ಕಡೆ ದಿನವಾದ ಇಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ, ಬಳ್ಳಾರಿಯಲ್ಲಿ ವಿ.ಎಸ್.ಉಗ್ರಪ್ಪ, ಜಮಖಂಡಿಯಲ್ಲಿ ಆನಂದ್ ಸಿದ್ದುನ್ಯಾಮೇಗೌಡ ಅವರು ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ನಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಉಭಯ ಪಕ್ಷಗಳ ನಾಯಕರು ಹಾಜರಿದ್ದರು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಉಗ್ರಪ್ಪ ಅವರ ಪತ್ನಿ, ಸಚಿವ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಪಿ.ಟಿ.ಪರಮೇಶ್ವರ್ ನಾಯಕ್, ಅಲ್ಲಮ್ ವೀರಭದ್ರಪ್ಪ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜೆ.ಶಾಂತಾ ಅವರು ಸಹ ಇಂದು ಶಾಸಕ ಶ್ರೀರಾಮುಲು, ಮಾಜಿ ಶಾಸಕ ಸುರೇಶ್‍ಬಾಬು ಮತ್ತಿತರರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿದ್ದು ನ್ಯಾಮೇಗೌಡರ ಪುತ್ರ ಆನಂದ್ ಸಿದ್ದುನ್ಯಾಮೇಗೌಡ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್, ಜೆಡಿಎಸ್ ಈ ಉಪಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಶಿವಮೊಗ್ಗದಲ್ಲಿ ಉಭಯ ಪಕ್ಷಗಳ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿದಿದ್ದರೆ, ಬಳ್ಳಾರಿಯಲ್ಲಿ ವಿ.ಎಸ್.ಉಗ್ರಪ್ಪ ಸ್ಪರ್ಧೆಗಿಳಿದಿದ್ದಾರೆ. ಅದೇ ರೀತಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದರೆ, ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆನಂದ್ ಸಿದ್ದು ನ್ಯಾಮೇಗೌಡ ಅವರು ಸ್ಪರ್ಧಿಸಿದ್ದಾರೆ.

ರಾಮನಗದಲ್ಲಿ ಜೆಡಿಎಸ್‍-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ. ಸಿಎಂ ಕುಮಾರಸ್ವಾಮಿ, ಶಾಸಕ ಮುನಿರತ್ನ ಅವರೂ ಜೊತೆಗಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಸ್ಪರ್ಧೆ ಮಾಡಿದ್ದಾರೆ. ಈ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಪೈಪೋಟಿ ಏರ್ಪಡಲಿದೆ. ಈ ಉಪಸಮರ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಮುಂಬರುವ ಲೋಕಸಭೆ ಉಪಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗುತ್ತಿದೆ. ಹೀಗಾಗಿ ಮೂರೂ ರಾಜಕೀಯ ಪಕ್ಷಗಳಿಗೆ ರಾಜ್ಯದ ಮಟ್ಟಿಗೆ ಪ್ರತಿಷ್ಠೆಯ ಕಣವಾಗಿ ಈ ಚುನಾವಣೆ ಮಾರ್ಪಟ್ಟಿದೆ. (ಎನ್.ಬಿ)

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಕೆಎಎಸ್ ಅಧಿಕಾರಿ ಡಾ.ಸಿದ್ದರಾಮಯ್ಯ ಅವರಿಂದ ನಾಮಪತ್ರ ಸಲ್ಲಿಕೆ.
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್‍-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಎಲ್.ಆರ್.ಶಿವರಾಮೇಗೌಡ ನಾಮಪತ್ರ ಸಲ್ಲಿಕೆ. ಸಚಿವರಾದ ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ, ಕೆ.ಜೆ.ಜಾರ್ಜ್, ಸಿ.ಎಸ್.ಪುಟ್ಟರಾಜು ಅವರು ಚಿತ್ರದಲ್ಲಿದ್ದಾರೆ.

Leave a Reply

comments

Related Articles

error: