
ಮೈಸೂರು
ಸಮಾಜವನ್ನು ಮಾನವೀಯತೆ ದೃಷ್ಟಿಯಿಂದ ನೋಡಿ: ಡಾ.ಮಂಜುಳಾ
ಸಮಾಜವನ್ನು ಮಾನವೀಯತೆಯ ದೃಷ್ಟಿಯಿಂದ ನೋಡಬೇಕು ಎಂದು ಮುಂಬೈ ಹೈಕೋರ್ಟ್ ನ್ಯಾಯಾಧೀಶೆ ಡಾ.ಮಂಜುಳಾ ಚೆಲ್ಲೂರ್ ತಿಳಿಸಿದರು.
ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ 9ನೇ ಪದವೀಧರರ ದಿನಾಚರಣೆಯಲ್ಲಿ ಡಾ.ಮಂಜುಳಾ ಚೆಲ್ಲೂರ್ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರಿಗೂ ಬದುಕುವ ಸ್ವಾತಂತ್ರ್ಯವಿದ್ದು, ಇನ್ನೊಬ್ಬರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಬಾರದು. ಹೆಣ್ಣು ಮಕ್ಕಳಿಗೆ ವಿಶೇಷ ಶಿಕ್ಷಣ ನೀಡಿ, ಭದ್ರತೆಯನ್ನು ನೀಡಬೇಕು. ಸಮಾಜದಲ್ಲಿ ಸಮಾನತೆಯಿಂದ ಬದುಕುವಂತಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 626 ವಿದ್ಯಾರ್ಥಿಗಳು ಪದವಿ ಪತ್ರಗಳನ್ನು ಸ್ವೀಕರಿಸಿದರು. ವೇದಿಕೆಯಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಪರೀಕ್ಷಾಂಗ ಅಧಿಕಾರಿ ಶಿವಮೂರ್ತಿ, ಜೆಎಸ್ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಸುರೇಶ್, ಮತ್ತಿತರರು ಉಪಸ್ಥಿತರಿದ್ದರು.