ಪ್ರಮುಖ ಸುದ್ದಿ

ಸಿಎಜಿ ವರದಿ ಕುರಿತಂತೆ ಬಿಜೆಪಿ ನಾಯಕರು ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ : ದಿನೇಶ್ ಗುಂಡೂರಾವ್

ರಾಜ್ಯ(ಬೆಂಗಳೂರು)ಡಿ.10:- ಸಚಿವ ಸಂಪುಟ ವಿಸ್ತರಣೆ ಇದೇ 22 ರಂದು ನಡೆಯುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದಿಲ್ಲಿ ತಿಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಉಭಯ ಪಕ್ಷಗಳ ನಾಯಕರು ತೀರ್ಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬಗ್ಗೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟಾಗಿದೆ ಎಂಬ ಬಗ್ಗೆ ಅವರ ಗಮನ ಸೆಳೆದಾಗ ಎಲ್ಲವನ್ನೂ ಗಮನದಲ್ಲಿರಿಸಿಕೊಂಡೇ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.

ಪೂರ್ವನಿಗದಿತ ಕಾರ್ಯಕ್ರಮದಂತೆ ಸಮನ್ವಯಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನದ 2ನೇ ವಾರದಲ್ಲಿ ಅವರು ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಲಿದ್ದಾರೆ. ಡಿ. 18 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಹೇಳಿದರು.

ಸಿಎಜಿ ವರದಿ ಕುರಿತಂತೆ ಬಿಜೆಪಿ ನಾಯಕರು ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ರಾಜಕೀಯ ದುರುದ್ದೇಶದಿಂದ ಇಂತಹ ಆರೋಪ ಮಾಡಲಾಗಿದೆ. 4 ಬಾರಿ ಆಯ್ಕೆಯಾಗಿರುವ ಸಿ.ಟಿ ರವಿ ಅವರು ಬಾಲಿಶ ಹೇಳಿಕೆ ನೀಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

ಪ್ರತಿಪಕ್ಷ ಬಿಜೆಪಿಯ ಟೀಕಾಸ್ತ್ರಗಳಿಗೆ ಸಮರ್ಥವಾಗಿ ಉತ್ತರ ನೀಡಲು ಮೈತ್ರಿಸರ್ಕಾರದ ನಾಯಕರು ಸಮರ್ಥರಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಯಾವುದೇ ಹಿಂಜರಿಕೆ ಇಲ್ಲದೆ ಮಿತ್ರ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವುದು ಅನಿವಾರ್ಯವಾಗಲಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: