ಕರ್ನಾಟಕಪ್ರಮುಖ ಸುದ್ದಿ

ಶ್ರೀರಂಗಪಟ್ಟಣ ಪ್ರವಾಸೋದ್ಯಮ ಅಭಿವೃದ್ಧಿಗೆ ರೂ.20 ಕೋಟಿ ಮಂಜೂರು: ಸಾ.ರಾ.ಮಹೇಶ್

ಮಂಡ್ಯ (ಡಿ.25): ಐತಿಹಾಸಿಕ ನಗರವಾದ ಶ್ರೀರಂಗಪಟ್ಟಣಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು ಏಷ್ಯದಲ್ಲಿ ಶ್ರೀರಂಗಪಟ್ಟಣಕ್ಕೆ ಐತಿಹಾಸಿಕವಾದ ಹೆಸರು ಇದೆ. ಇಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 20 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವರಾದ ಸಾರಾ ಮಹೇಶ್ ಅವರು ತಿಳಿಸಿದರು.

ಅವರು ಇಂದು ಶ್ರೀರಂಗಪಟ್ಟಣದ ಮಯೂರ ರಿವರ್ ವ್ಯೂ ಹೋಟೆಲ್ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಹಾಗೂ ಶ್ರೀರಂಗಪಟ್ಟಣ ಶಾಸಕರ ಮನವಿ ಮೇರೆಗೆ ಶ್ರೀರಂಗಪಟ್ಟಣದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಂದು ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದು ಶ್ರೀರಂಗಪಟ್ಟಣದ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಸರ್ಕಾರ ರೂ 20 ಕೋಟಿ ಮಂಜೂರು ಮಾಡಿದೆ ಎಂದು ಸಚಿವರು ತಿಳಿಸಿದರು.

ಶ್ರೀರಂಗಪಟ್ಟಣದಲ್ಲಿರುವ ಕೋಟೆಗಳ ಸುತ್ತಾ ಇರುವ ಕಂದಕಗಳ ನವೀಕರಣ ಮಾಡಿ ನಂತರ ಅಲ್ಲಿ ನೀರನ್ನು ತುಂಬಿಸಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಆಕರ್ಷಕವಾದ ವಿದ್ಯುತ್ ದೀಪಗಳ ಅಳವಡಿಕೆ ಹಾಗೂ ಉದ್ಯಾನವನ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.

ನಿಮಿಷಾಂಭ ದೇವಸ್ಥಾನದ ಭಕ್ತಾಧಿಗಳ ಅನುಕೂಲಕ್ಕಾಗಿ ಅಲ್ಲಿ ಹೈಟೆಕ್ ಶೌಚಾಲಯದ ನಿರ್ಮಾಣಕ್ಕಾಗಿ ರೂ 50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮಾಡಲಾಗುವುದು ಎಂದು ತಿಳಿಸಿದ ಸಚಿವರು ಶ್ರೀರಂಗನಾಥಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಮರ್ಪಕವಾದ ವಾಹನದ ಪಾರ್ಕಿಂಗ್ ವ್ಯವಸ್ಥೆ ಹಾಗೂ ಅಲ್ಲಿನ ಮೂಲಭೂತ ವ್ಯವಸ್ಥೆ ಹಾಗೂ ಇತರೆ ಸ್ಮಾರಕಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಶ್ರೀರಂಗಪಟ್ಟಣ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಒಂದು ಹಂತದ ನೀಲಿ ನಕ್ಷೆ ತಯಾರಾಗಿದ್ದು, ನಂತರದ ದಿನಗಳಲ್ಲಿ ಶಾಸಕರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಹೆಚ್ಚುವರಿಯಾಗಿ ಅನುದಾನ ಬೇಕಾದಲ್ಲಿ ಅನುದಾನ ನೀಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಶ್ರೀರಂಗಪಟ್ಟಣದಲ್ಲಿರುವ ಕೋಟೆ ಹಾಗೂ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಅವರಣವನ್ನು ಭೇಟಿ ನೀಡಿ ಸಚಿವರಾದ ಸಾರಾ ಮಹೇಶ್ ಅವರು ಪರಿಶೀಲಿಸಿದರು. ಶ್ರೀರಂಗಪಟ್ಟಣ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ರಾಮು, ಪಾಂಡವಪುರ ಉಪವಿಭಾಗಧಿಕಾರಿ ಶೈಲಜಾ, ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು. (ಎನ್.ಬಿ)

Leave a Reply

comments

Related Articles

error: