ಮೈಸೂರು

ಸರ್ಕಾರದ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು : ಡಿ.ರಂದೀಪ್

ಜನಮನ ಕಾರ್ಯಕ್ರಮ ಫಲಾನುಭವಿಗಳೊಂದಿಗೆ ಜಿಲ್ಲಾ ಸಚಿವರ ಸಂವಾದ ಕಾರ್ಯಕ್ರಮವನ್ನು ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿ ರಂದೀಪ್ ಡಿ.  ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಮನ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ದತಾ ಸಭೆ ನಡೆಸಿ ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ದೊರೆಯಬೇಕು ಎಂಬುದು ಸರ್ಕಾರದ ಸದುದ್ದೇಶವಾಗಿದೆ ಎಂದರು.
ಸರ್ಕಾರ ಜಾರಿಗೆ ತಂದಿರುವ ಕೃಷಿ ಭಾಗ್ಯ, ಅನ್ನ ಭಾಗ್ಯ ಕ್ಷೀರ ಭಾಗ್ಯ, ಮನಸ್ವಿನಿ ಮೈತ್ರಿ, ವಿದ್ಯಾಸಿರಿ, ಋಣ ಮುಕ್ತ, ಕ್ಷೀರಾಧಾರೆ, ವಸತಿ ಭಾಗ್ಯ, ರಾಜೀವ್ ಆರೋಗ್ಯ ಭಾಗ್ಯವನ್ನು ಮುಂತಾದ ಯೋಜನೆಗಳನ್ನು ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಫಲಾನುಭವಿಗಳಿಂದಲೇ ಅವರ ಅನಿಸಿಕೆಯನ್ನು ತಿಳಿದುಕೊಂಡು ಇನ್ನು ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಜನ-ಮನ ಕಾರ್ಯಕ್ರಮದ ದಿನದಂದು ಖುದ್ದು ಹಾಜರಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಜಿಲ್ಲಾ ಸಚಿವರು ಫಲಾನುಭವಿಗಳೊಂದಿಗೆ ಸಂವಾದ ನಡೆಸುವಾಗ ಮುಖ್ಯ ವಿಷಯಗಳನ್ನು ಪಟ್ಟಿ ಮಾಡಿಕೊಂಡು ವರದಿ ನೀಡುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಟಿ. ವೆಂಕಟೇಶ್  ಮಾತನಾಡಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಫಲಾನುಭವಿಗಳ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಗೆ ಸಲ್ಲಿಸುವುದರ ಜೊತೆಗೆ ಕಾರ್ಯಕ್ರಮದ ದಿನದ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಿ ಭಾಗವಹಿಸಲು ತಿಳಿಸಬೇಕು ಎಂದರು.
ಸಮಾರಂಭ ಸ್ಥಳದಲ್ಲಿ ಸ್ವಚ್ಫತೆ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಅಲಂಕಾರ ಹಾಗೂ ಅಲಂಕಾರಿಕ ಗಿಡಗಳ ಪಾಟ್ಸ್, ಹೂಗಳೊಂದಿಗೆ ವೇದಿಕೆ ಅಲಂಕಾರಕ್ಕೆ ಅಗತ್ಯ ಕ್ರಮ ವಹಿಸುವಂತೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಯವರು ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪಿ. ಶಿವಶಂಕರ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಪ್ರಸಾದ್ ಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಭಾ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕಿ ರಾಧಾ,ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್. ರಾಜು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

comments

Related Articles

error: