ಪ್ರಮುಖ ಸುದ್ದಿ

ಮಳೆಹಾನಿ ಸಂತ್ರಸ್ತರಿಗೆ ಮನೆ : ನಿರ್ಮಾಣ ಕಾಮಗಾರಿ ಚುರುಕುಗೊಳಿಸಿ : ಸಚಿವ ಸಾ.ರಾ.ಮಹೇಶ್ ಸೂಚನೆ

ರಾಜ್ಯ(ಮಡಿಕೇರಿ )ಫೆ.2 :- ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದ್ದು, ಈ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಂಬೂರು, ಕರ್ಣಂಗೇರಿ, ಬಿಳಿಗೇರಿ, ಗಾಳಿಬೀಡು, ಮದೆ ಗ್ರಾಮಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಇನ್ಫೋಸಿಸ್  ಸಂಸ್ಥೆಯಿಂದಲೂ ಮನೆ ನಿರ್ಮಿಸಿಕೊಡಲಾಗುತ್ತಿದೆ ಎಂದು ಅವರು ತಿಳಿಸಿದರು.  ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು, ಅದರಂತೆ ಅವರ ಪರವಾಗಿ ಕಾರ್ಯ ನಿರ್ವಹಿಸಬೇಕು. ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು.  ಸಂತ್ರಸ್ತರಿಗೆ ಎರಡು ಬೆಡ್ ರೂಂ ಒಳಗೊಂಡ ಮನೆಯನ್ನು 9.85 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವುದು ದೇಶದಲ್ಲಿಯೇ ಪ್ರಥಮ ಎಂದು ಸಚಿವರು ಹೇಳಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮನೆ ನಿರ್ಮಾಣದ ಕಾಮಗಾರಿ ಪ್ರಗತಿ ಅಷ್ಟಾಗಿ ನಡೆಯುತ್ತಿಲ್ಲ. ಮನೆ ಮತ್ತು ಬೆಳೆ ಹಾನಿ  ಪರಿಹಾರ ತಲುಪಿಲ್ಲ ಎಂದು ಅವರು ಹೇಳಿದರು. ಬೆಳೆ ಹಾನಿ ಪರಿಹಾರ ಸಂಬಂಧ ಇದುವರೆಗೆ ಹಣ ಪಾವತಿಯಾಗಿಲ್ಲ. ಕೂಡಲೇ ಹಣ ಪಾವತಿಸಬೇಕು. ಬಿದ್ದಿರುವ ಮರಗಳನ್ನು ಮಾಲೀಕರಿಗೆ ನೀಡುವಂತಾಗಬೇಕು ಎಂದು ಹೇಳಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡಬೇಕು. ಅರ್ಹರಿಗೆ ಸವಲತ್ತುಗಳು ದೊರೆಯಬೇಕು. ಮನೆ ನಿರ್ಮಾಣ ಸಂಬಂಧ ಅರ್ಹರನ್ನು ಕೈಬಿಟ್ಟಿದ್ದಲ್ಲಿ, ಕೂಡಲೇ ಪರಿಶೀಲಿಸಿ ಸೇರ್ಪಡೆ ಮಾಡಬೇಕು ಎಂದು ತಿಳಿಸಿದರು.   ಇನ್‍ಪೋಸಿಸ್ ಸಂಸ್ಥೆಯ ಸುಧಾಮೂರ್ತಿ ಅವರು ಮಾತನಾಡಿ ದಸರಾ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಇನ್‍ಪೋಸಿಸ್ ಪ್ರತಿಷ್ಠಾನ ವತಿಯಿಂದ 25 ಕೋಟಿ ರೂ. ನೀಡಲಾಗುವುದು. ಅದರಂತೆ ಮೊದಲ ಹಂತದಲ್ಲಿ 100 ಮನೆ, 2 ನೇ ಹಂತದಲ್ಲಿ 100 ಮನೆ ಒಟ್ಟು 200 ಮನೆ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ರಸ್ತೆಗಳು ಸುಧಾರಣೆಯಾಗುತ್ತಿವೆ. ಸಾರಿಗೆ ಸಂಪರ್ಕ ಯಥಾಸ್ಥಿತಿಗೆ ಮರಳುತ್ತಿದೆ ಎಂದು ಸುಧಾಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಕೃತಿ ವಿಕೋಪಕ್ಕೆ ತುತ್ತಾದ ಮರಗಳನ್ನು ಮಾಲೀಕರಿಗೆ ನೀಡುವಂತಾಗಲು, ಇದೇ ಫೆ.8 ಅಥವಾ 11 ರಂದು ನಡೆಯುವ ‘ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ’ದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಬಿದ್ದಿರುವ ಮರಗಳನ್ನು ಭೂ ಮಾಲೀಕರಿಗೆ ನೀಡುವಂತಾಗಬೇಕು ಎಂಬುದು ಹಿಂದಿನಿಂದಲೂ ಕೇಳಿಬರುತ್ತಿದೆ. ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗುವುದು  ಎಂದು ಸಾ.ರಾ.ಮಹೇಶ್ ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಓ ಕೆ.ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರರಾದ ಕುಸುಮ, ಇನ್‍ಪೋಸಿಸ್ ಫೌಂಡೇಶನ್‍ನ ಪ್ರತಿನಿಧಿಗಳು, ನಾನಾಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: