ಮೈಸೂರು

ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ : ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳಿಗೆ ಸೂಚನೆ

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಜ.26 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದಲ್ಲಿ ಗಣರಾಜ್ಯೋತ್ಸವ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಿ.ರಂದೀಪ್ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಲು ಅಧಿಕಾರಿಗಳನ್ನೊಳಗೊಂಡ ಪೆರೇಡ್, ಸಾಂಸ್ಕೃತಿಕ, ಸಾರಿಗೆ, ಸ್ವಾಗತ ಹಾಗೂ ಸ್ವಚ್ಛತಾ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜ.26 ರಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಪೊಲೀಸ್, ಎನ್ ಸಿ ಸಿ, ಗೃಹರಕ್ಷಕ ದಳ, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪೆರೇಡ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಅಂದು ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮ ಹಾಗೂ ಆಕರ್ಷಕವಾಗಿ ಮೂಡಿಬರಬೇಕಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳನ್ನು ಆಯ್ಕೆ ಮಾಡಿ ತರಬೇತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಪಿಯು ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸದಂತೆ ಅರಿವು ಮೂಡಿಸಬೇಕು. ವ್ಯಾಪಾರಸ್ಥರು ಸಹ ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜ ಮಾರಾಟ ಮಾಡದಂತೆ ಪರಿಶೀಲನೆ ನಡೆಸಲು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು. ಪ್ಲಾಸ್ಟಿಕ್ ಧ್ವಜವನ್ನು ಉಪಯೋಗಿಸದೆ ಎಲ್ಲರೂ ಬಟ್ಟೆಯ ಧ್ವಜವನ್ನು ಬಳಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಮೈಸೂರು ನಗರ ಪೊಲೀಸ್ ಉಪ ಆಯುಕ್ತ ಡಾ.ಹೆಚ್.ಟಿ.ಶೇಖರ್, ಉಪವಿಭಾಗಾಧಿಕಾರಿ ಸಿ.ಎಲ್.ಆನಂದ್, ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ಸಿ.ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

comments

Related Articles

error: