ಕರ್ನಾಟಕಪ್ರಮುಖ ಸುದ್ದಿ

ಲೋಕಸಭಾ ಚುನಾವಣೆಗೂ ಮೈತ್ರಿ ನಿಶ್ಚಿತ: ಕಾಂಗ್ರೆಸ್ ಸಂಸದರಿರುವ ಕ್ಷೇತ್ರಗಳು ಜೆಡಿಎಸ್‍ಗೆ?

ಬೆಂಗಳೂರು (ಫೆ.14): ರಾಜ್ಯದಲ್ಲಿ ದೋಸ್ತಿ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವುದು ನಿಶ್ಚಿತವಾಗಿದೆ.

ಹಾಸನ ಮತ್ತು ಮಂಡ್ಯ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಸದಸ್ಯರಿದ್ದು, ಈ 2 ಕ್ಷೇತ್ರಗಳ ಜೊತೆಗೆ ಹಳೆ ಮೈಸೂರು ಭಾಗದ 10 ಕ್ಷೇತ್ರಗಳನ್ನು ಬಿಟ್ಟುಕೊಡಲು ಜೆಡಿಎಸ್ ಬೇಡಿಕೆ ಇಟ್ಟಿದೆ. ಆದರೆ ಇದಕ್ಕೆ ಒಪ್ಪದ ಕಾಂಗ್ರೆಸ್, ಉತ್ತರ ಕರ್ನಾಟಕದಲ್ಲಿ 3 -4 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ತಿಳಿಸಿದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಮೈತ್ರಿಗೆ ಕ್ಷೇತ್ರಗಳ ಹಂಚಿಕೆ ವಿಚಾರವೇ ದೊಡ್ಡ ತಲೆನೋವಾಗಿದೆ. ಮೋದಿ ಅಲೆಯ ನಡುವೆಯೂ ಕಳೆದ ಲೋಕಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಗಳಿಸಿದೆ.

ಇವುಗಳಲ್ಲಿ ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿರುವ ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಜೆಡಿಎಸ್ ಕೇಳಿದೆ ಆದರೆ ಇದಕ್ಕೆ ಕಾಂಗ್ರೆಸ್ ಒಪ್ಪಿಲ್ಲ ಎನ್ನಲಾಗಿದೆ. ಪ್ರಾಬಲ್ಯವಿಲ್ಲದ ಉತ್ತರ ಕರ್ನಾಟಕದ ಕ್ಷೇತ್ರಗಳಿಗಿಂತ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಬಿಟ್ಟುಕೊಡಬೇಕೆಂದು ಜೆಡಿಎಸ್ ಬೇಡಿಕೆಯಾಗಿದೆ.

ಕಾಂಗ್ರೆಸ್ ಹಾಲಿ ಸಂಸದರು ಇರುವ ಒಂದೆರಡು ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡುವ ಕುರಿತು ಚರ್ಚೆ ನಡೆದಿದೆ. ಆದರೆ ಸಂಸದರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೈತ್ರಿ ಕ್ಷೇತ್ರ ಹಂಚಿಕೆ ವಿಚಾರವೇ ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ ಎಂದು ಹೇಳಲಾಗಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಗುವುದು ನಿಶ್ಚಿತವಾಗಿರುವುದರಿಂದ ಚುನಾವಣೆ ಲೆಕ್ಕಾಚಾರಗಳು ಬದಲಾಗುವ ಸಾಧ್ಯತೆ ಇದೆ. (ಎನ್.ಬಿ)

Leave a Reply

comments

Related Articles

error: