ಪ್ರಮುಖ ಸುದ್ದಿ

ಕಾಂಗ್ರೆಸ್ ಬಲವರ್ಧನೆಗೆ ಸತತ ಶ್ರಮ : ನೂತನ ಅಧ್ಯಕ್ಷ ಮಂಜುನಾಥ್ ಕುಮಾರ್ ಭರವಸೆ : ಮಡಿಕೇರಿಯಲ್ಲಿ ಅಧಿಕಾರ ಸ್ವೀಕಾರ

ರಾಜ್ಯ(ಮಡಿಕೇರಿ) ಫೆ.17 :- ಕಾರ್ಯಕರ್ತರ ಸಹಕಾರದೊಂದಿಗೆ ಬೇರು ಮಟ್ಟದಿಂದಲೇ ಪಕ್ಷವನ್ನು ಬಲವರ್ಧನೆಗೊಳಿಸುವ ಮೂಲಕ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್‍ನ ಗತವೈಭವವನ್ನು ಮರಳಿಸುವ ಪ್ರಯತ್ನ ಮಾಡುವುದಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿಯಾಗಿದ್ದು, ಜಿಲ್ಲೆಯಾದ್ಯಂತ ಯುವ ಕಾರ್ಯಕರ್ತರನ್ನು ಸಂಘಟಿಸುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಕಾಂಗ್ರೆಸ್‍ಗೆ ಉಜ್ವಲ ಭವಿಷ್ಯವಿದ್ದು, ಮುಂಬುರುವ ಎಲ್ಲಾ ಚುನಾವಣೆಗಳನ್ನು ಎದುರಿಸಲು ಪಕ್ಷದ ಪ್ರತಿಯೊಂದು ಘಟಕ ಸಜ್ಜಾಗಬೇಕೆಂದು ಕರೆ ನೀಡಿದರು.

ಹೈಕಮಾಂಡ್ ಜಿಲ್ಲಾಧ್ಯಕ್ಷ ಸ್ಥಾನದ ಮಹತ್ತರ ಜವಬ್ದಾರಿಯನ್ನು ನೀಡಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುವುದಾಗಿ ಮಂಜುನಾಥ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಂಜುನಾಥ್ ಕುಮಾರ್ ಅವರನ್ನು ಜಯಘೋಷಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.

ಈ ಸಂದರ್ಭ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರುಗಳಾದ ಜುಲೇಕಾಬಿ, ಪ್ರಕಾಶ್ ಆಚಾರ್ಯ, ವೆಂಕಟೇಶ್, ಉದಯಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಪ್ರಮುಖರಾದ ಎಂ.ಎ.ಉಸ್ಮಾನ್, ಹನೀಫ್, ಪ್ರೇಮ ಕೃಷ್ಣಪ್ಪ, ಮಿನಾಜ್ ಪ್ರವೀಣ್ ಮತ್ತಿತರರು ಹಾಜರಿದ್ದರು.

ಇದೇ ಸಂದರ್ಭ ಕಾರ್ಯಕರ್ತರು ವಕ್ಫ್ ಮಂಡಳಿಯ ನೂತನ ಅಧ್ಯಕ್ಷ ಕೆ.ಎ.ಯಾಕುಬ್ ಅವರಿಗೂ ಅಭಿನಂದನೆ ಸಲ್ಲಿಸಿದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: