ಪ್ರಮುಖ ಸುದ್ದಿ

ಲೋಕಸಭಾ ಚುನಾವಣೆ : ವ್ಯವಸ್ಥಿತ ಕಾರ್ಯನಿರ್ವಹಣೆಗೆ ಜಿ.ಪಂ ಸಿಇಒ ಲಕ್ಷ್ಮಿಪ್ರಿಯಾ ಸೂಚನೆ

ರಾಜ್ಯ(ಮಡಿಕೇರಿ )ಮಾ.11 :- ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದ್ದು, ಸೆಕ್ಟರ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ವಿವಿಂಗ್ ತಂಡ, ಹೀಗೆ ವಿವಿಧ ತಂಡಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಬಂಧಪಟ್ಟ ನೋಡೆಲ್ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ   ಮಾತನಾಡಿದರು.   ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ವರದಿಯನ್ನು ಕಾಲ ಕಾಲಕ್ಕೆ ದಾಖಲೆ ಸಹಿತ ಒದಗಿಸಬೇಕು ಎಂದು ಸೂಚನೆ ನೀಡಿದರು.

ಚುನಾವಣೆಯ ಪೂರ್ವ ಸಿದ್ಧತೆಯ ಸಂಪೂರ್ಣವಾದ ವೀಡಿಯೋ ಮತ್ತು ಪೋಟೋಗಳನ್ನು ಸಂಗ್ರಹಿಸಿಕೊಂಡು ಮುಂಜಾಗರೂಕತೆ ವಹಿಸಬೇಕು. ಚುನಾವಣೆಯ ಪೂರ್ವಸಿದ್ಧತೆಯ ಪ್ರತಿದಿನದ ವರದಿಯನ್ನು ಸಲ್ಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣೆಗೆ ಪ್ರತಿಯೊಬ್ಬರೂ ಸಹಕರಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಚುನಾವಣೆ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಸಭೆ ಸಮಾರಂಭಗಳು, ರ್ಯಾಲಿ ಮತ್ತಿತರವನ್ನು ಗಮನಹರಿಸಬೇಕು ಎಂದು ಅವರು ತಿಳಿಸಿದರು. ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡದಂತೆ ವ್ಯವಸ್ಥಿತವಾಗಿ ಚುನಾವಣೆ ನಡೆಸಬೇಕು ಎಂದು ಅವರು ತಿಳಿಸಿದರು.

ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಚುನಾವಣೆಯ ಕರ್ತವ್ಯದ ವಾಹನಗಳಿಗೆ ಫಲಕಗಳನ್ನು ಅಂಟಿಸಿಕೊಳ್ಳಬೇಕು. ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವ ಮೂಲಕ ಶಾಂತಿಯುತವಾದ ಚುನಾವಣೆಗೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದಿನ್, ಐಟಿಡಿಪಿ ಅಧಿಕಾರಿ ಸಿ.ಶಿವಕುಮಾರ್, ಬಿಸಿಎಂ ಇಲಾಖೆ ಅಧಿಕಾರಿ ಅವಿನ್, ಕಾರ್ಮಿಕ ಇಲಾಖೆ ಅಧಿಕಾರಿ ರಾಮಕೃಷ್ಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜಶೇಖರ, ಸೆಕ್ಟರ್, ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ವಿವಿಂಗ್ ತಂಡದ ಅಧಿಕಾರಿಗಳು ಇತರರು ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: