ಪ್ರಮುಖ ಸುದ್ದಿ

ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

ರಾಜ್ಯ(ಮಡಿಕೇರಿ )ಮಾ.22 :- ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಕೊಡಗು ಜಿಲ್ಲಾ ವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ವೈದ್ಯರಿಲ್ಲದ ಆಸ್ಪತ್ರೆಗಳಿಗೆ ಆಯುಷ್ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ದೊರೆಯಬೇಕು. ಯಾವುದೇ ರೀತಿಯ ದೂರುಗಳು ಕೇಳಿ ಬರಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.   ಜಿಲ್ಲೆಯ ಕುಟ್ಟ ಸಮುದಾಯ ಆಸ್ಪತ್ರೆ ಸೇರಿದಂತೆ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ಹೆಚ್ಚುವರಿ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಸದ್ಯ ಜಿಲ್ಲೆಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಬೇಕು. ವೈದ್ಯರಿಗೆ ತುಟ್ಟಿಭತ್ಯೆ ಮತ್ತು ಪ್ರಯಾಣ ಭತ್ಯೆ ನೀಡಲು ಆದೇಶದಲ್ಲಿಯೇ ನಮೂದಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ವೈದ್ಯರ ಕೊರತೆ ಇರುವ ಸಮುದಾಯ ಆಸ್ಪತ್ರೆಗಳಿಗೆ ವೈದ್ಯರನ್ನು ನಿಯೋಜಿಸುವುದರ ಜೊತೆಗೆ ಎಲ್ಲಾ ವೈದ್ಯರನ್ನು ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು. ತಾರತಮ್ಯ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ   ಹೇಳಿದರು.    ಚುನಾವಣೆ ಮುಗಿದ ನಂತರ ಮಳೆಗಾಲ ಆರಂಭವಾಗುತ್ತದೆ. ಆದ್ದರಿಂದ ವಿಪತ್ತು ಎದುರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಜ್ಜಾಗಬೇಕಿದೆ. ಆ ನಿಟ್ಟಿನಲ್ಲಿ ಈಗಿನಿಂದಲೇ ಯೋಜನೆ ರೂಪಿಸಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಜಿಲ್ಲೆಯಲ್ಲಿ ತಜ್ಞ ವೈದ್ಯರ 20 ಹುದ್ದೆಗಳು, 9 ಸಾಮಾನ್ಯ ವೈದ್ಯರು, ಒಬ್ಬರು ದಂತ ವೈದ್ಯರು ಹುದ್ದೆಗಳು ಖಾಲಿ ಇವೆ ಎಂದು ಅವರು ಮಾಹಿತಿ ನೀಡಿದರು.  ಸಮುದಾಯ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಈ ಆಸ್ಪತ್ರೆಗಳಿಗೆ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲು ಪ್ರಯತ್ನಿಸಲಾಗಿದೆ ಎಂದು ಅವರು ತಿಳಿಸಿದರು.

ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ಮತ್ತೊಬ್ಬ ವೈದ್ಯರು ಆಸ್ಪತ್ರೆಗೆ ಬಂದ ನಂತರ ತೆರಳಬೇಕು. ಆ ನಿಟ್ಟಿನಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳು ಗಮನಹರಿಸುವಂತಾಗಬೇಕು ಎಂದು ಅವರು ತಿಳಿಸಿದರು.  ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ಯೋಜನೆ ರೂಪಿಸಲಾಗುತ್ತಿದ್ದು, ಮಡಿಕೇರಿ ತಾಲ್ಲೂಕಿಗೆ 3, ಸೋಮವಾರಪೇಟೆ 2 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 1 ತಂಡ ನಿಯೋಜಿಸಲಾಗುತ್ತದೆ. ಹಾಗೆಯೇ ಮೈಸೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಿಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ಡಾ.ಯತಿರಾಜು, ಡಾ.ಶ್ರೀನಿವಾಸ್, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಆನಂದ್, ಡಾ.ಶಿವಕುಮಾರ್, ವಿವಿಧ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಇತರರು ಹಾಜರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: