ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ರೂಪಕ್ ಕುಮಾರ್ ದತ್ತಾ?

ರಾಜ್ಯ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಪೊಲೀಸ್ ಅಧಿಕಾರಿ ರೂಪಕ್  ಕುಮಾರ್ ದತ್ತಾ ಅವರನ್ನು ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ವಿಧಾನ ಸೌಧದ ಮುಂಭಾಗ ಪತ್ರಕರ್ತರು ನೂತನ ಪೊಲೀಸ್ ಮಹಾ ನಿರ್ದೇಶಕರ ನೇಮಕಕ್ಕೆ ಸಂಬಂಧಿಸಿದಂತೆ ಆರ್.ಕೆ. ದತ್ತಾ ಅವರ ಹೆಸರು ಶಿಫಾರಸ್ಸು ಮಾಡಲಾಗಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದಾಗ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮತಿ ರೂಪದಲ್ಲಿ ಉತ್ತರ ನೀಡಿದರು. ರಾಜ್ಯ ಸರ್ಕಾರ ಈಗಾಗಲೇ ಹೊಸ ಪೊಲೀಸ್ ಮಹಾ ನಿರ್ದೇಶಕರ ನೇಮಕ ಮಾಡಲು ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದು. ಕೇಂದ್ರ ಸರ್ಕಾರದಿಂದ ಆದೇಶ ಬಂದ ಕೂಡಲೇ ರಾಜ್ಯ ಸರ್ಕಾರ ನೂತನ ಡಿಜಿಪಿಯನ್ನು ನೇಮಿಸಿ ಅಧಿಕೃತ ಆದೇಶವನ್ನು ಒಂದೆರಡು ದಿನದಲ್ಲಿ ಹೊರಡಿಸಲಿದೆ.

ಕೇಂದ್ರ ಸೇವೆಯಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಆರ್.ಕೆ.ದತ್ತಾ, ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗುವುದು ಬಹುತೇಕ ಖಚಿತವಾಗಿದ್ದು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೇಮಕಕ್ಕೆ ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ. ಕೇಂದ್ರ ಸೇವೆಯಲ್ಲಿರುವ ದತ್ತಾ ಅವರನ್ನು ರಾಜ್ಯಕ್ಕೆ ಕಳುಹಿಸಿಕೊಡುವಂತೆ ಕೇಂದ್ರಕ್ಕೆ ಪತ್ರ ಬರೆಯಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.  ಹಾಲಿ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಇದೇ ಜ. 31ಕ್ಕೆ ನಿವೃತ್ತಿ ಹೊಂದಲಿದ್ದು ಅವರ ಸ್ಥಾನಕ್ಕೆ ಆರ್.ಕೆ.ದತ್ತಾ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದು ಬಹುತೇಕ ಖಚಿತವಾಗಿದೆ.

Leave a Reply

comments

Related Articles

error: