ಮೈಸೂರು

ವೀರ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಹಾಗೂ ಬೃಹತ್ ಜಾಗೃತಿ ಸಮಾವೇಶ : ಫೆ.1ರಂದು

ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಜಯಂತೋತ್ಸವ ಸಮಿತಿ ವತಿಯಿಂದ ಫೆ.1 ರಂದು ವೀರ ಮಡಿವಾಳ ಮಾಚಿದೇವರ ಜಯಂತೋತ್ಸವ ಹಾಗೂ ಬೃಹತ್  ಜಾಗೃತಿ ಸಮಾವೇಶ, ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎಸ್.ರವಿನಂದನ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.30ಕ್ಕೆ ನಗರದ ಜೆ.ಕೆ.ಮೈದಾನದಲ್ಲಿರುವ ಅಮೃತಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶ್ರೀ ಶಿವಯೋಗಾನಂದಪುರಿ ಸ್ವಾಮೀಜಿ, ಶ್ರೀ ಬಸವಮಾಚಿದೇವ ಸ್ವಾಮೀಜಿ, ಶ್ರೀ ಮುಕ್ತಾನಂದ ಸ್ವಾಮೀಜಿ ಅವರು ಉಪಸ್ಥಿತರಿರಲಿದ್ದು, ರಾಜ್ಯಾಧ್ಯಕ್ಷ ನಂಜಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಂಜಪ್ಪ ಅವರು ಪ್ರೊ.ಅನ್ನಪೂರ್ಣಮ್ಮ ನವರ ವರದಿ ಆಧಾರದ ಮೇಲೆ ಮಡಿವಾಳ ಜನಾಂಗವನ್ನು ಪರಿಶಿಷ್ಟಜಾತಿಗೆ ಸೇರಿಸಬೇಕು. ಮಡಿವಾಳರ ಸಮಗ್ರ ಅಭಿವೃದ್ಧಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕು. ಶ್ರೀ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಸರ್ಕಾರದಿಂದ ಆಚರಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಜೆ.ಕೆ.ಮೈದಾನದವರೆಗೆ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ದೇಶದ 17 ರಾಜ್ಯಗಳಲ್ಲಿ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಜನಾಂಗವನ್ನು ಪರಿಶಿಷ್ಟಜಾತಿಗೆ ಸೇರಿಸಿರುವಂತೆ ಕರ್ನಾಟಕ ರಾಜ್ಯ ಸೇರಿದಂತೆ ಉಳಿದ 14 ರಾಜ್ಯಗಳು ಮಡಿವಾಳ ಜನಾಂಗವನ್ನು ಎಸ್‍ಸಿಗೆ ಸೇರಿಸುವಂತೆ ಒತ್ತಾಯಿಸಿ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಮಾರ್ಚ್ 10 ರಂದು ರಾಮಲೀಲಾ ಮೈದಾನದಲ್ಲಿ ಬೃಹತ್ ಜಾಗೃತ ಸಮಾವೇಶ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮಡಿವಾಳ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಮಿತಿ ಕಾರ್ಯದರ್ಶಿ ನಾಗೇಶ್, ಅರ್ಜುನ್, ಜಗದೀಶ್, ತೇಜಸ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

comments

Related Articles

error: