ಕರ್ನಾಟಕ

ಆರೋಗ್ಯ ಚಿಕಿತ್ಸಾ ಸೌಲಭ್ಯ ಇನ್ನಷ್ಟು ಉತ್ತಮಗೊಳಿಸಲು ಜಿಪಂ ಸಿಇಒ ಡಾ.ವಿಜಯಪ್ರಕಾಶ್ ಸೂಚನೆ

ಹಾಸನ (ಏ.16): ತಾಲ್ಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ಆರೋಗ್ಯ ಚಿಕಿತ್ಸಾ ಸೌಲಭ್ಯ ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಅರ್ಪಣಾ ಮನೋಭಾವದ ಸೇವೆ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್. ವಿಜಯಪ್ರಕಾಶ್ ತಿಳಿಸಿದ್ದಾರೆ.

ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆ ಹಾಗೂ ಮೊಸಳೆ ಹೊಸಳ್ಳಿ, ಪಡುವಲಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೋಮವಾರ ಭೇಟಿ ಮಾಡಿ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳು, ವೈದ್ಯರ ಹಾಜರಾತಿಗಳ ಬಗ್ಗೆ ಪರಿಶೀಲಿಸಿದ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಸುಸರ್ಜಿತ ಆಸ್ಪತ್ರೆ ಹಾಗೂ ಇತರ ಪೂರಕ ಸೌಲಭ್ಯಗಳು ಅದರ ನಿರೀಕ್ಷಿತ ಉದ್ದೇಶವನ್ನು ಈಡೇರಿಸಲು ವೈದ್ಯರು, ಸಿಬ್ಬಂದಿಗಳ ಹೊಣೆಗಾರಿಕೆ ಹೆಚ್ಚು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚನೆ ನೀಡಿದರು.

ತಮ್ಮ ಆಸ್ಪತ್ರೆ ಭೇಟಿ ಸಂದರ್ಭ ಕೆಲವು ವೈದ್ಯರು ಗೈರಿ ಹಾಜರಿ ಗಮನಿಸಿದ ಅವರು ದೂರವಾಣಿ ಮೂಲಕವೇ ಸಂಪರ್ಕಿಸಿ ಇದು ಮರುಕಳಿಸದಿರಲಿ ಎಂದು ಎಚ್ಚರಿಕೆ ನೀಡಿದರು. ಅಲ್ಲದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ನೇರವಾಗಿ ಮಾತನಾಡಿಸಿ ಹಾಗೂ ಕೆಲವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದಲೂ ಮಾಹಿತಿ ಪಡೆದ ಡಾ. ಕೆ.ಎನ್. ವಿಜಯ ಪ್ರಕಾಶ್ ಶ್ರದ್ದೆಯಿಂದ ಕೆಲಸ ನಿರ್ವಹಿಸಲು ಆರೋಗ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಚಿಕಿತ್ಸಾ ಸೌಲಭ್ಯಗಳ ಕೌನ್ಸಲಿಂಗ್‍ಗಾಗಿ ಇರುವ ಕೇಂದ್ರವು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸಮಾಡಿ ಸಾರ್ವಜನಿಕರಿಗೆ ಉಪಯುಕ್ತವಾಗಿ ಮಾಹಿತಿ, ಸಲಹೆಗಳನ್ನು ನೀಡಬೇಕು ಎಂದು ಅವರು ಸಲಹೆ ನೀಡಿದರು.

ಪ್ರತಿಯೊಂದು ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾವು ಕಡಿತ, ರ್ಯಾಬೀಸ್ ಹಾಗೂ ಗರ್ಭಿಣಿಯರಿಗೆ ನೀಡುವ ಚುಚ್ಚು ಮದ್ದುಗಳು ಕಡ್ಡಾಯವಾಗಿ ಇರಬೇಕು. ಈ ಬಗ್ಗೆ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮೇಲ್ವಿಚಾರಣೆ ವಹಿಸಬೇಕು ಎಂದು ಹೇಳಿದರು.

ಇದೇ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ವಿವಿಧ ಅಂಗನವಾಡಿ ಕೇಂದ್ರಗಳಿಗೂ ಭೇಟಿ ನೀಡಿ ಅಲ್ಲಿ ನೀಡಲಾಗುತ್ತಿರುವ ಆಹಾರ ಸ್ವಚ್ಚತೆ, ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಸಲಹೆ ಸೂಚನೆಗಳನ್ನು ನೀಡಿದರು. ಅಲ್ಲದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುದಾನ ಸಮರ್ಪಕತೆಗಳನ್ನು ಅವರು ಪರಿಶೀಲಿಸಿದರು. (ಎನ್.ಬಿ)

Leave a Reply

comments

Related Articles

error: