ಪ್ರಮುಖ ಸುದ್ದಿ

ಭಾರೀ ವಾಹನಗಳ ವೇಗ ನಿಯಂತ್ರಣಕ್ಕೆ ಒತ್ತಾಯ : ಡಿಸಿ, ಎಸ್‍ಪಿ ಗೆ ಮನವಿ

ರಾಜ್ಯ(ಮಡಿಕೇರಿ) ಜೂ.11 :- ಮಡಿಕೇರಿಯಿಂದ ಕುಶಾಲನಗರ ಮಾರ್ಗವಾಗಿ ಮೈಸೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನಗಳು ಅತೀ ವೇಗದಲ್ಲಿ ಸಂಚರಿಸುತ್ತಿರುವುದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಗ್ರೀನ್ ಸಿಟಿ ಫೋರಂ ಸಂಘಟನೆ, ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಹೆದ್ದಾರಿಯಲ್ಲಿ ಮಿತಿಮೀರಿದ ವೇಗದಲ್ಲಿ ಭಾರೀ ವಾಹನಗಳು ಸಂಚರಿಸುತ್ತಿದ್ದು, ದ್ವಿಚಕ್ರ ವಾಹನ ಸೇರಿದಂತೆ ಸಣ್ಣಪುಟ್ಟ ವಾಹನಗಳ ಚಾಲಕರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಮುಂದೆ ಸಾಗಬೇಕಾಗಿದೆ. ಈ ಮಾರ್ಗದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಲೇ ಇದೆ.
ಇತ್ತೀಚಿನ ದಿನಗಳಲ್ಲಿ ಕಾಂಕ್ರಿಟ್ ಮಿಶ್ರಣದ ಟಿಪ್ಪರ್‍ಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದು, ಮಿತಿಮೀರಿದ ವೇಗದಲ್ಲಿ ಅಪಘಾತಗಳು ಸಂಭವಿಸುತ್ತಿದೆ. ಪ್ರಾಣಹಾನಿ ಲೆಕ್ಕವಿಲ್ಲದಷ್ಟಾಗಿದ್ದು, ಕಾಂಕ್ರಿಟ್ ಮಿಶ್ರಣದ ಟಿಪ್ಪರ್‍ಗಳ ಅನಾರೋಗ್ಯಕರ ಪೈಪೋಟಿ ಮತ್ತು ಮಿತಿಮೀರಿದ ವೇಗ ಅಪಾಯವನ್ನು ತಂದೊಡುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ರೀತಿಯ ಕ್ರಮ ಕೈಗೊಂಡು ವಾಹನಗಳ ವೇಗವನ್ನು ನಿಯಂತ್ರಿಸಬೇಕೆಂದು ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೆರ ಜಯಾಚಿಣ್ಣಪ್ಪ ಮನವಿ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಫೋರಂ ನ ಸ್ಥಾಪಕಾಧ್ಯಕ್ಷ ಚೆಯ್ಯಂಡ ಸತ್ಯ, ಭಾರೀ ವಾಹನಗಳ ವೇಗವನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಎಸ್‍ಪಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಅಪಾಯದ ಮುನ್ಸೂಚನೆ ಮತ್ತು ವೇಗ ನಿಯಂತ್ರಣದ ಫಲಕಗಳನ್ನು ಅಳವಡಿಸಲಾಗುವುದು, ಸಂಚಾರಿ ಪೊಲೀಸರು ಹೆದ್ದಾರಿ ವಾಹನಗಳ ಮೇಲೆ ಹೆಚ್ಚು ನಿಗಾ ಇಡುವಂತೆ ಸೂಚನೆ ನೀಡಲಾಗುವುದು ಮತ್ತು ಮಿತಿ ಮೀರಿದ ವೇಗದಲ್ಲಿರುವ ವಾಹನಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‍ಪಿ ತಿಳಿಸಿರುವುದಾಗಿ ಸತ್ಯ ಮಾಹಿತಿ ನೀಡಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: