ಪ್ರಮುಖ ಸುದ್ದಿ

ಸಾಮೂಹಿಕ ಅತ್ಯಾಚಾರ ಪ್ರಕರಣ : ಕಠಿಣ ಕ್ರಮಕ್ಕೆ ಯುವ ಕಾಂಗ್ರೆಸ್ ಆಗ್ರಹ

ರಾಜ್ಯ( ಮಡಿಕೇರಿ) ಜು.5 : – ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದೆ.
ಮಾಧ್ಯಮ ಹೇಳಿಕೆ ನೀಡಿರುವ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಪಿ.ಹನೀಫ್ ಸಂಪಾಜೆ, ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಹೇಯ ಕೃತ್ಯವಾಗಿದ್ದು, ಶೈಕ್ಷಣಿಕ ಕ್ಷೇತ್ರವೇ ತಲೆ ತಗ್ಗಿಸುವಂತಾಗಿದೆ ಎಂದು ವಿಷಾದಿಸಿದ್ದಾರೆ.
ವಿದ್ಯಾರ್ಜನೆಯ ಮೂಲಕ ದೇಶದ ಭವಿಷ್ಯ ಬರೆಯಬೇಕಾದ ಯುವ ಸಮೂಹ ಇಂದು ಮಾದಕ ವ್ಯಸನಿಗಳಾಗಿ ಹಾದಿ ತಪ್ಪುತ್ತಿದ್ದಾರೆ. ಅಮಾಯಕ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಿತಿ ಮೀರುತ್ತಿದ್ದು, ಕಠಿಣ ಕ್ರಮಗಳಿಂದ ಮಾತ್ರ ಇದನ್ನು ನಿಯಂತ್ರಿಸಬಹುದಾಗಿದೆ. ತಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಲೈಂಗಿಕ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಕಾನೂನನ್ನು ಸರಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಪುತ್ತೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದಲ್ಲಿ ಎಬಿವಿಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎನ್ನುವ ಆರೋಪವಿದ್ದು, ದುಷ್ಕರ್ಮಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಗಲ್ಲು ಶಿಕ್ಷೆಗೆ ಶಿಫಾರಸ್ಸು ಮಾಡಬೇಕೆಂದು ಹನೀಫ್ ಆಗ್ರಹಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: