ಪ್ರಮುಖ ಸುದ್ದಿ

ಜು.10 ರಿಂದ ಮಡಿಕೇರಿಯಲ್ಲಿ ಖಾಸಗಿ ಬಸ್‍ಗಳ ಏಕಮುಖ ಸಂಚಾರ ಆರಂಭ : ನೂತನ ನಿಲ್ದಾಣದಲ್ಲಿ ನಿಲುಗಡೆಗೆ ವ್ಯವಸ್ಥೆ

ರಾಜ್ಯ(ಮಡಿಕೇರಿ) ಜು.8 :- ಜುಲೈ 10 ರಿಂದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಖಾಸಗೀ ಬಸ್‍ಗಳು ಪ್ರಾಯೋಗಿಕವಾಗಿ ಸಂಚಾರ ಆರಂಭಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಖಾಸಗಿ ಬಸ್ ಮಾಲೀಕರ ಸಂಘದ ಮುಖ್ಯಸ್ಥರ ಉಪಸ್ಥಿತಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಯೋಗಿಕವಾಗಿ ಒಂದು ತಿಂಗಳ ಮಟ್ಟಿಗೆ ಖಾಸಗಿ ಬಸ್‍ಗಳು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮೂಲಕ ರಾಸೀಟು ಮಾರ್ಗ, ಭಾರತೀಯ ಜೀವ ವಿಮಾ ನಿಗಮ ಕಚೇರಿ ಮಾರ್ಗದ ಮೂಲಕ ನೂತನ ಖಾಸಗಿ ಬಸ್ ನಿಲ್ದಾಣ ತಲಪುವುದು.
ಹಾಗೆಯೇ ನೂತನ ಖಾಸಗಿ ಬಸ್ ನಿಲ್ದಾಣದಿಂದ ಪ್ರೆಸ್‍ಕ್ಲಬ್, ಕೈಗಾರಿಕಾ ಬಡಾವಣೆ ಮಾರ್ಗ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತ ಮಾರ್ಗ ಖಾಸಗಿ ಬಸ್ ಓಡಾಟಕ್ಕೆ ನಿರ್ಧರಿಸಲಾಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹೊಸ ಖಾಸಗಿ ಬಸ್ ನಿಲ್ದಾಣ ನಿರ್ಮಾಣವಾಗಿ ಹಲವು ತಿಂಗಳು ಕಳೆದಿದ್ದು, ಖಾಸಗಿ ಬಸ್‍ಗಳು ನೂತನ ಖಾಸಗಿ ಬಸ್ ನಿಲ್ದಾಣದಿಂದ ಸಂಚರಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಿದೆ ಎಂದು ಅವರು ಕೋರಿದರು.
ಮುಂದುವರೆದು ಖಾಸಗಿ ಬಸ್‍ಗಳು ಖಾಸಗಿ ಬಸ್ ನಿಲ್ದಾಣದಿಂದ ಭಾರತೀಯ ಸ್ಟೇಟ್ ಬ್ಯಾಂಕ್ ಮಾರ್ಗ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಪ್ರಾಯೋಗಿಕವಾಗಿ ಬಸ್‍ಗಳು ಓಡಾಡಲಿವೆ. ಹಾಗೆಯೇ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ರಾಜಸೀಟು, ಭಾರತೀಯ ಜೀವ ವಿಮಾ ಕಚೇರಿ ಮಾರ್ಗ ಮೂಲಕ ನೂತನ ಖಾಸಗಿ ಬಸ್ ನಿಲ್ದಾಣ ತಲುಪಲಿವೆ. ಈ ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರು ತಮ್ಮ ಅಭಿಪ್ರಾಯ ತಿಳಿಸುವಂತೆ ಹೇಳಿದರು.
ಈ ಕುರಿತು ಮಾತನಾಡಿದ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ರಾಜಸೀಟು, ಎಲ್‍ಐಸಿ ಮಾರ್ಗದ ಮೂಲಕ ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಖಾಸಗಿ ಬಸ್‍ಗಳು ಸಂಚರಿಸಬಹುದಾಗಿದೆ.
ಆದರೆ ಖಾಸಗಿ ಬಸ್ ನಿಲ್ದಾಣದಿಂದ ಭಾರತೀಯ ಸ್ಟೇಟ್ ಬ್ಯಾಂಕ್ ಮಾರ್ಗದ ಮೂಲಕ ಸಂಚರಿಸಿದಲ್ಲಿ ವಾಹನಗಳ ದಟ್ಟಣೆ ಅಧಿಕವಾಗುತ್ತದೆ. ಆದ್ದರಿಂದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಪ್ರೆಸ್‍ಕ್ಲಬ್, ಕೈಗಾರಿಕಾ ಬಡಾವಣೆ ಮೂಲಕ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮಾರ್ಗ ಖಾಸಗಿ ಬಸ್‍ಗಳು ಸಂಚರಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಒಂದು ತಿಂಗಳ ವರೆಗೆ ಪ್ರಾಯೋಗಿಕವಾಗಿ ಖಾಸಗಿ ಬಸ್‍ಗಳು ಸಂಚರಿಸಲಿ, ಜುಲೈ 25 ರಂದು ಡಿವೈಎಸ್‍ಪಿ ಅವರ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರ ಉಪಸ್ಥಿತಿಯಲ್ಲಿ ಚರ್ಚಿಸಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಮುಂದುವರೆದು ಹೊಸೂರು ರಮೇಶ್ ಜೋಯಪ್ಪ ಅವರು ರಾಜಸೀಟು ಮಾರ್ಗದಲ್ಲಿ ಪ್ರವಾಸಿಗರ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ, ಇದರಿಂದ ಖಾಸಗಿ ಬಸ್‍ಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಹಾಗೆಯೇ ಹಳೇ ಖಾಸಗಿ ಬಸ್ ನಿಲ್ದಾಣದ ಎದುರು ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ ತಂಗುದಾಣ ನಿರ್ಮಾಣ ಮಾಡಬೇಕು ಎಂದು ಅವರು ಕೋರಿದರು.
ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಮೇದಪ್ಪ ಅವರು ನೂತನ ಖಾಸಗಿ ಬಸ್ ನಿಲ್ದಾಣ ಬಳಿ ಆಟೋಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಅವರು ಮನವಿ ಮಾಡಿದರು. ಹಾಗೆಯೇ ಕುಶಾಲನಗರದಲ್ಲಿ ಖಾಸಗಿ ಬಸ್ ನಿಲ್ದಾಣದಿಂದ ಖಾಸಗಿ ಬಸ್‍ಗಳು ಸಂಚಾರ ಆರಂಭಿಸಿದ್ದು, ಈ ನಿಲ್ದಾಣದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿದೆ ಎಂದು ಜನಾರ್ಧನ ಪ್ರಭು ಅವರು ಕೋರಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನೂತನ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‍ಗಳ ಪ್ರವೇಶ ಮತ್ತು ಹೊರಗೆ ತೆರಳುವ ಬಗ್ಗೆ ನಾಮಫಲಕ ಅಳವಡಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಡಿವೈಎಸ್‍ಪಿ ಸುಂದರ ರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುಂಜುನಾಥ್ ಎಸ್ ಶಿರಾಳಿ, ಪೌರಾಯುಕ್ತರಾದ ರಮೇಶ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಅನೂಪ್ ಮಾದಪ್ಪ, ಷಣ್ಮುಗ, ಪ್ರಾದೇಶಿಕ ಸಾರಿಗೆ ಇಲಾಖೆಯ ವ್ಯವಸ್ಥಾಪಕರಾದ ಶಿವಣ್ಣ, ರೀಟಾ ಅವರು ಹಲವು ಸಲಹೆ ನೀಡಿದರು. (ಕೆಸಿಐ,ಎಸ್.ಎಚ್)

 

Leave a Reply

comments

Related Articles

error: