
ಕರ್ನಾಟಕಪ್ರಮುಖ ಸುದ್ದಿ
ರಾಜ್ಯಪಾಲರ ಭೇಟಿಗೆ ತೆರಳಿದ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಜು.26-ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರಿದ್ದಾರೆ.
ರಾಜ್ಯಪಾಲರ ಭೇಟಿಗೂ ಮುನ್ನ ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲು ಮನವಿ ಸಲ್ಲಿಸಲಿದ್ದಾರೆ. ಇಂದು ಯಡಿಯೂರಪ್ಪ ಒಬ್ಬರು ಮಾತ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 12.30ಕ್ಕೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ತೆರಳುವ ಮುಂಚೆ ಯಡಿಯೂರಪ್ಪ ತಮ್ಮ ನಿವಾಸದ ಬಳಿಯಿರುವ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ, ಇಂದೇ ಪ್ರಮಾಣವಚನ ಸ್ವೀಕರಿಸಲು ಅವಕಾಶ ಕೋರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅವಕಾಶ ಕೋರುವಂತೆ ಯಾವುದೇ ಸೂಚನೆ ನೀಡಲಾಗಿಲ್ಲ ಎಂದು ಹೇಳಲಾಗುತ್ತಿದೆ. (ಎಂ.ಎನ್)