ಪ್ರಮುಖ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ರಾಜ್ಯ( ಮಡಿಕೇರಿ) ಆ.1 :- ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು. ಹಾಗೆಯೇ ಸರ್ಕಾರದ ಶಿಷ್ಟಾಚಾರದಂತೆ ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಬಂಧ ರಚಿಸಲಾಗಿರುವ ಸಮಿತಿಯ ಮುಖ್ಯಸ್ಥರು ತಮ್ಮ ಹಂತದಲ್ಲಿ ಸಭೆ ನಡೆಸಿ ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶದ ಎಲ್ಲರ ಸಂಭ್ರಮ ಆಚರಣೆಯಾಗಿದ್ದು, ಸ್ವಯಂ ಪ್ರೇರಣೆಯಿಂದ ಎಲ್ಲರೂ ಭಾಗವಹಿಸಬೇಕು. ಆಗಸ್ಟ್, 15 ರಂದು ಬೆಳಗ್ಗೆ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು, ಹಾಜರಾತಿಯಲ್ಲಿ ತಪ್ಪದೆ ಸಹಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ವಾಟರ್‍ಫ್ರೂಫ್ ವೇದಿಕೆ ನಿರ್ಮಾಣ ಮಾಡುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರ್‍ಗಳಿಗೆ ಸೂಚನೆ ನೀಡಿದರು.
ರಿಹರ್ಸ್‍ಲ್‍ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಲಘು ಉಪಹಾರ, ಕುಡಿಯುವ ನೀರು ವ್ಯವಸ್ಥೆ ಮಾಡುವಂತೆ ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಅಂದು ಬೆಳಗ್ಗೆ ಉಪಹಾರ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಸ್ವಾತಂತ್ರ್ಯೋತ್ಸವ ಅಂಗವಾಗಿ ಕಾವೇರಿ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್‍ಗಳು, ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಹಲವು ಸಲಹೆ ನೀಡಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: