ಪ್ರಮುಖ ಸುದ್ದಿ

ಮಳೆಹಾನಿ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಒತ್ತು ನೀಡಿ : ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಸೂಚನೆ

ರಾಜ್ಯ( ಮಡಿಕೇರಿ) ಸೆ.5 :- ಕೊಡಗಿನಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕಾರ್ಯಕ್ಕೆ ಮೊದಲ ಆದ್ಯತೆ ನೀಡುವಂತೆ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಾಸಕದ್ವಯರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಎಂಎಲ್‍ಸಿ ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಅವರುಗಳ ಉಪಸ್ಥಿತಿಯಲ್ಲಿ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸಭೆ ನಡೆಸಿದ ಕಾರಜೋಳ ಅವರು ಜಿಲ್ಲೆಯಲ್ಲಾದ ನಷ್ಟದ ಬಗ್ಗೆ ಮಾಹಿತಿ ಪಡೆದರು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ರಸ್ತೆ ಕಾಮಗಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಮತ್ತು ಸುಧಾರಣೆ ಬಗ್ಗೆ ಮಾಹಿತಿ ಪಡೆದು ಸಕಾಲದಲ್ಲಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ರಸ್ತೆಗಳನ್ನು ಶಾಶ್ವತವಾಗಿ ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಗಮನಹರಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಉಪ ಮುಖ್ಯಮಂತ್ರಿ ಸೂಚಿಸಿದರು.
ಎಸ್‍ಸಿಪಿ/ಟಿಎಸ್‍ಪಿ ಕಾಮಗಾರಿಗಳು, ನಬಾರ್ಡ್ ಕಾಮಗಾರಿಗಳು, ಕೊಡಗು ವಿಶೇಷ ಪ್ಯಾಕೇಜ್ ಹಾಗೂ ಕಟ್ಟಡಗಳು ಹೀಗೆ ಹಲವು ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದು, ರಾಜ್ಯ ಹೆದ್ದಾರಿ ನವೀಕರಣ ಮಾಡುವುದು, ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ನಿರ್ದೇಶನ ನೀಡಿದರು.
ವಿದ್ಯಾರ್ಥಿ ನಿಲಯಗಳಲ್ಲಿ ನಿರ್ವಹಣೆ ಉತ್ತಮವಾಗಿರಬೇಕು. ವಿದ್ಯಾರ್ಥಿಗಳು ಹುಷಾರಿಲ್ಲದ ಸಂದರ್ಭದಲ್ಲಿ ಔಷಧೋಪಚಾರ ಒದಗಿಸಬೇಕು. ತಂದೆ ತಾಯಂದಿರಂತೆ ಮಕ್ಕಳ ಕಡೆ ಗಮನ ಹರಿಸಬೇಕೆಂದು ಹೇಳಿದರು.
ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ವಾಜಪೇಯಿ ವಸತಿ ಶಾಲೆ ಸೇರಿದಂತೆ ಎಲ್ಲಾ ವಸತಿ ಶಾಲೆಗಳು ಮತ್ತು ಆಶ್ರಮ ಶಾಲೆಗಳಲ್ಲಿ ಸ್ವಂತ ಜಾಗ ಇರಬೇಕು. ಜಾಗ ಇಲ್ಲದ ಕಡೆಗಳಲ್ಲಿ ತಕ್ಷಣ ಜಾಗ ಗುರುತಿಸಿ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಗಿರಿಜನ ಹಾಡಿಗಳಲ್ಲಿ ರಸ್ತೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಹೀಗೆ ಹಲವು ಮೂಲ ಸೌಲಭ್ಯ ಕಲ್ಪಿಸಬೇಕಿದ್ದು, ಸುಮಾರು 15 ಕೋಟಿ ರೂ. ಕಾಮಗಾರಿ ಆಗಬೇಕಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ತೊಂದರೆಯಾಗಿದೆ ಎಂದು ಆರೋಪಿಸಿದರು.
ಅತಿವೃಷ್ಟಿಯಿಂದ ರಸ್ತೆ, ಸೇತುವೆಗಳು ಹದಗೆಟ್ಟಿದ್ದು, ಇವುಗಳನ್ನು ಸರಿಪಡಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೆ.ಜಿ.ಬೋಪಯ್ಯ ಕೋರಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ತೀವ್ರ ಮಳೆಯಿಂದ ಸೇತುವೆಗಳು ಬೀಳುವ ಸ್ಥಿತಿಯಲ್ಲಿವೆ. ಆದ್ದರಿಂದ ಅಗತ್ಯ ಕ್ರಮ ಕೈಗೊಂಡು ತುರ್ತಾಗಿ ಲೋಕೋಪಯೋಗಿ ಇಲಾಖೆಯಿಂದ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಉಪ ಮುಖ್ಯಮಂತ್ರಿ ಅವರಲ್ಲಿ ಕೋರಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲಾಡಳಿತ ಭವನ ಬಳಿ ಮಂಗಳೂರು ರಸ್ತೆ ಕಡೆಗೆ ತಡೆಗೋಡೆ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದ್ದು, ಕಾಮಗಾರಿಯನ್ನು ಕೈಗೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಎಂಜಿನಿಯರ್ ರಮೇಂದ್ರ, ಮಂಗಳೂರು ವಿಭಾಗದ ಅಧೀಕ್ಷಕ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಅವರು ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ರಾಷ್ಟ್ರೀಯ ಹೆದ್ದಾರಿ ವಿಭಾಗದ ಮುಖ್ಯ ಎಂಜಿನಿಯರ್ ಗಣೇಶ್, ಅಧೀಕ್ಷಕ ಎಂಜಿನಿಯರ್ ರಾಘವನ್, ಕಾರ್ಯಪಾಲಕ ಎಂಜಿನಿಯರ್ ಹೊಳ್ಳ ಅವರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ವಸತಿ ಶಾಲೆಗಳಿಗೆ ಸ್ವಂತ ಜಾಗ ಮತ್ತಿತರ ಬಗ್ಗೆ ಉಪ ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು.
ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಎಂಜಿನಿಯರ್ ರಮೇಂದ್ರ, ಮಂಗಳೂರು ವಿಭಾಗದ ಅಧೀಕ್ಷಕರ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್, ಸುರೇಶ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕ ಬಸವಯ್ಯ, ಶೇಖರ್, ದೇವರಾಜು ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: