ಪ್ರಮುಖ ಸುದ್ದಿ

ಅಪೌಷ್ಠಿಕತೆ ನಿವಾರಿಸಲು ಸ್ಥಳೀಯ ಆಹಾರ ಬಳಸಿ : ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ ಸಲಹೆ

ರಾಜ್ಯ( ಮಡಿಕೇರಿ) ಸೆ.20 : – ಸ್ಥಳೀಯವಾಗಿ ಸಿಗುವಂತಹ ಉತ್ತಮ ಪೌಷ್ಟಿಕ ಆಹಾರ ಬಳಸುವುದರಿಂದ ಅಪೌಷ್ಟಿಕತೆಯನ್ನು ನಿವಾರಣೆ ಮಾಡಲು ಸಹಕಾರಿಯಾಗಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಕೃತಿಕ ಹಾಗೂ ಸ್ಥಳೀಯವಾಗಿ ದೊರೆಯುವಂತಹ ಆಹಾರ ಹೆಚ್ಚು ಬಳಸುವುದರೊಂದಿಗೆ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವುದರೊಂದಿಗೆ ಅಪೌಷ್ಟಿಕತೆ ನಿವಾರಣೆಯಾಗಲು ಸಹಕಾರಿಯಾಗಿದೆ ಎಂದು ಅವರು ನುಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಲೋಕೇಶ್ ಅವರು ಮಾತನಾಡಿ ತಾಯಂದಿರ ಮತ್ತು ಮಕ್ಕಳ ಉತ್ತಮ ಆರೋಗ್ಯದಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಆದ್ದರಿಂದ ಪೌಷ್ಟಿಕ ಆಹಾರವನ್ನು ಪ್ರತೀ ನಿತ್ಯ ಬಳಸುವುದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಯಾಗುತ್ತದೆ. ಇದರಿಂದ ಉತ್ತಮ ಆರೋಗ್ಯ ಪಡೆಯಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ್ ಅವರು ಮಾತನಾಡಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ತಾಯಂದಿರು ಮತ್ತು ಮಕ್ಕಳಿಗಾಗಿ ಸಮತೋಲಿತ ಪೋಷಕಾಂಶ ನೀಡುವ ಕಾರ್ಯಕ್ರಮವು ಜಿಲ್ಲಾ ಆಸ್ಪತ್ರೆಯು ಕಾರ್ಯೋನ್ಮುಖವಾಗಿದ್ದು, ಅದಕ್ಕಾಗಿ ವಿಶೇಷ ಘಟಕವನ್ನು ಸ್ಥಾಪಿಸಲಾಗಿದ್ದು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ಶಾಸ್ತ್ರದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಅವರು ಮಾತನಾಡಿ ಉತ್ತಮ ಆರೋಗ್ಯ ಹೊಂದಲು ಉತ್ತಮ ಆಹಾರ ಅವಶ್ಯವಾಗಿದೆ. ಹಿಂದಿನ ಕಾಲದಲ್ಲಿ ಜನರು ಉತ್ತಮ ಆರೋಗ್ಯ ಹೊಂದಿರುತ್ತಿದ್ದರು. ಇದಕ್ಕೆ ಮುಖ್ಯ ಕಾರಣ ರಾಸಾಯನಿಕ ಇಲ್ಲದ ಆಹಾರ ಪದಾರ್ಥಗಳನ್ನು ಯಥೇಚ್ಛವಾಗಿ ಬಳಸುತ್ತಿದ್ದರು. ಆದರೆ ಇಂದಿನ ಕಾಲ ಘಟ್ಟದಲ್ಲಿ ರಾಸಾಯನಿಕ ಆಹಾರ ಪದಾರ್ಥಗಳ ಬಳಕೆಯಿಂದ ಅಪೌಷ್ಟಿಕತೆ ಹೆಚ್ಚಾಗುತ್ತಿದೆ. ಆದ್ದರಿಂದ ಆಹಾರ ಬಗ್ಗೆ ಗಮನಹರಿಸುವುದು ಅಗತ್ಯ ಎಂದರು.
ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆಯು ಸೆಪ್ಟೆಂಬರ್‍ನಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಈ ಅವಧಿಯಲ್ಲಿ ತಾಯಿ ಮತ್ತು ಮಗುವಿಗೆ ಅವಶ್ಯವಿರುವ ಪೌಷ್ಟಿಕ ಆಹಾರದ ಬಳಕೆ ಕುರಿತು ಜಾಗೃತಿ ಮೂಡಿಸುತ್ತಿರುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಮತ್ತು ವೈದ್ಯರುಗಳು, ವೈದ್ಯಕೀಯ ವಿದ್ಯಾರ್ಥಿಗಳು ಇತರರು ಇದ್ದರು. ಮಕ್ಕಳ ವಿಭಾಗದ ಡಾ.ವೀರೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಡಾ.ಅಚ್ಚುತಾ ಅವರು ಸ್ವಾಗತಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: