ಪ್ರಮುಖ ಸುದ್ದಿ

ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ : ಹಾಡಿ ಮಕ್ಕಳ ಆರೋಗ್ಯ ಕಾಪಾಡಲು ಜಿಲ್ಲಾಧಿಕಾರಿ ಸೂಚನೆ

ರಾಜ್ಯ(ಮಡಿಕೇರಿ) ಸೆ.21 :- ಹಾಡಿಗಳಲ್ಲಿರುವ ಮಕ್ಕಳ ಕಡೆ ವಿಶೇಷವಾಗಿ ಗಮನ ನೀಡಿ, ಅಪೌಷ್ಟಿಕತೆ ನಿವಾರಣೆ ಮಾಡಬೇಕು. ಜೊತೆಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ ಮಾಡಬೇಕು ಹಾಗೂ ಎಲ್ಲಾ ಮಕ್ಕಳು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಮಾತ್ರೆಗಳನ್ನು ನೀಡಬೇಕು ಎಂದು ಅವರು ಹೇಳಿದರು.
ಮಕ್ಕಳಲ್ಲಿ ರಕ್ತಹೀನತೆ ತಡೆಯುವ ನಿಟ್ಟಿನಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಕಾರ್ಯಕ್ರಮವು ಸೆಫ್ಟೆಂಬರ್ 25 ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ ಅವರು ತಿಳಿಸಿದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಜಂತುಹುಳು ನಿವಾರಣಾ ಮಾತ್ರೆ ನೀಡದೇ ಬಾಕಿ ಇರುವ ಮಕ್ಕಳಿಗೆ ಸೆ.30 ರಂದು ಈ ಮಾತ್ರೆ ನೀಡಲಾಗುವುದು ಎಂದು ಅವರು ಹೇಳಿದರು.
ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ 1 ರಿಂದ 5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6 ರಿಂದ 19 ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಮಾತ್ರೆ ನೀಡಲಾಗುತ್ತದೆ ಎಂದರು.
ಆಶಾ ಕಾರ್ಯಕರ್ತೆಯರು 6 ರಿಂದ 19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿ ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2 ರಿಂದ 19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆಯನ್ನು ಜಗಿದು ನುಂಗಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್, ಜಿಲ್ಲಾ ಆಯುಷ ಆಧಿಕಾರಿ ಡಾ.ರಾಮಚಂದ್ರ, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಡಾ.ಶಿವಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: