ಕರ್ನಾಟಕಪ್ರಮುಖ ಸುದ್ದಿ

ಕೇಂದ್ರದಿಂದ 1,200 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ: ಬಿಡುಗಡೆ ಹಣ ಸಾಲುವುದಿಲ್ಲ ಪ್ರತಿಪಕ್ಷಗಳ ಟೀಕೆ

ಬೆಂಗಳೂರು,ಅ.5-ಪ್ರತಿಪಕ್ಷಗಳ ಮುಖಂಡರು, ಸಾರ್ವಜನಿಕರಷ್ಟೇ ಅಲ್ಲದೆ, ಸ್ವಪಕ್ಷೀಯರೂ ಕೂಡ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ 1,200 ಕೋಟಿ ರೂಪಾಯಿ ನೆರೆ ಪರಿಹಾರ ಬಿಡುಗಡೆ ಮಾಡಿದೆ. ಇದರಿಂದ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಕೇಂದ್ರ ಸರ್ಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ಪ್ರಕಟಿಸಿದ್ದು, ಮುಂದಿನ ದಿನಗಳಲ್ಲಿ ಕೇಂದ್ರದಿದ ಇನ್ನಷ್ಟು ಪರಿಹಾರ ರಾಜ್ಯಕ್ಕೆ ಬರಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ . ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೆರವು ಸಿಗಲಿದೆ ಎಂಬ ವಿಶ್ವಾಸ ಇರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ನೆರೆ ಪರಿಹಾರದಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ವೇಗವಾಗಿ ಕೈಗೊಳ್ಳಲು ನೆರವಾಗಲಿದೆ ಎಂದು ಬಿಜೆಪಿ ಸಚಿವರು ಹಾಗೂ ಮುಖಂಡರು ಹೇಳುತ್ತಿದ್ದರೆ, ವಿಳಂಬ ಮಾಡಿ ತುಂಬಾ ಅಲ್ಪ ಪ್ರಮಾಣದ ನೆರವು ನೀಡಲಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ತರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ ಎಂದು ಟ್ವಿಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣ ಸಾಕಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಂಬಾ ವಿಳಂಬವಾಗಿ ತುಂಬಾ ಅಲ್ಪ ಪ್ರಮಾಣದ ನೆರವು ಬಿಡುಗಡೆ ಮಾಡಲಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ನೆರೆಯಿಂದಾಗಿ 35 ಸಾವಿರ ಕೋಟಿಯಿಂದ 1 ಲಕ್ಷ ಕೋಟಿ ರೂ. ಮೊತ್ತದ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ನಷ್ಟವನ್ನು ಅಂದಾಜಿಸಿತ್ತು. ಆ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಬಳಿಕ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿದೆ. (ಎಂ.ಎನ್)

Leave a Reply

comments

Related Articles

error: