ಕರ್ನಾಟಕ

ಅ.25 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ,ಅ.21-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅ.25 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ, ಸಂತ್ರಸ್ತರಿಗಾಗಿ ಕರ್ಣಂಗೇರಿಯಲ್ಲಿ ನಿರ್ಮಿಸಲಾಗಿರುವ ಮನೆಗಳ ಹಸ್ತಾಂತರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅ.25 ರಂದು ಬೆಳಿಗ್ಗೆ 10.45 ಗಂಟೆಗೆ ಮಡಿಕೇರಿಗೆ ಆಗಮಿಸಲಿರುವ ಮುಖ್ಯಮಂತ್ರಿಗಳು ಕರ್ಣಂಗೇರಿಯಲ್ಲಿ ಮನೆಗಳನ್ನು ಹಸ್ತಾಂತರ ಮಾಡಲಿದ್ದಾರೆ. ನಂತರ ಜಿಲ್ಲಾ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸಭೆಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕ್ರೀಡಾ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಪಾಲ್ಗೊಳ್ಳಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಇಲಾಖೆಗಳಲ್ಲಿ ಗುದ್ದಲಿ ಪೂಜೆ, ಉದ್ಘಾಟನೆಗೆ ಸಿದ್ಧಗೊಂಡಿರುವ ಯೋಜನೆಗಳ ಮಾಹಿತಿಯನ್ನು ತುರ್ತಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ನೀಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ವೇದಿಕೆ ಕಾರ್ಯಕ್ರಮ, ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ, ಸಿಬ್ಬಂದಿ ನಿಯೋಜನೆ, ಆ್ಯಂಬುಲೆನ್ಸ್, ವೈದ್ಯಕೀಯ ತಂಡ ಹೀಗೆ ಹಲವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್ ಅವರು ಮಾತನಾಡಿ, ಮುಖ್ಯಮಂತ್ರಿಯವರ ಆಗಮನದ ಹಿನ್ನೆಲೆಯಲ್ಲಿ ಅಗತ್ಯ ಬಂದೋಬಸ್ತ್ ಕೈಗೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಮಡಿಕೇರಿ ಡಿಎಫ್‍ಒ ಪ್ರಭಾಕರನ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿ.ಪಂ.ಉಪಕಾರ್ಯದರ್ಶಿ ಗುಡೂರು ಭೀಮಸೇನ, ಭೂ ದಾಖಲೆಗಳ ಉಪ ನಿರ್ದೇಶಕರು ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶ್ರೀನಿವಾಸ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಇಇ ಪ್ರಭು, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಐಟಿಡಿಪಿ ಅಧಿಕಾರಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ನಗರಸಭೆ ಆಯುಕ್ತರಾದ ರಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ರೇವಣ್ಣ, ಪ್ರವಾಸೋದ್ಯಮ ಅಧಿಕಾರಿ ರಾಘವೇಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ ಇತರರು ಹಾಜರಿದ್ದರು. (ಕೆಸಿಐ, ಎಂ.ಎನ್)

Leave a Reply

comments

Related Articles

error: