ಕರ್ನಾಟಕಪ್ರಮುಖ ಸುದ್ದಿ

ನೆರೆ ಪೀಡಿತ ಪ್ರದೇಶಗಳಿಗೆ ತೆರಳುವಂತೆ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು,ಅ.23-ಸಚಿವರು ತಕ್ಷಣ ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಯಡಿಯೂರಪ್ಪ ಆದೇಶಿಸಿದ್ದು, ಬುಧವಾರದಿಂದಲೇ ತಲಾ ಇಬ್ಬರು ಸಚಿವರ ತಂಡ ಜಿಲ್ಲೆಗಳಿಗೆ ತೆರಳಿ ಉಸ್ತುವಾರಿ ನಡೆಸಲಿದೆ.

ಸಚಿವರ ನಾಲ್ಕು ತಂಡ ಪ್ರವಾಹ ಪೀಡಿತ ಜಿಲ್ಲೆಗಳಿಗೆ ತಕ್ಷಣವೇ ತೆರಳಲಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಬಳಿಕ ತಮ್ಮ ವರದಿಯನ್ನು ಸರ್ಕಾರಕ್ಕೆ ನೀಡಲಿದ್ದಾರೆ. ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು ಕೋರಿ ಬೇಡಿಕೆ ಸಲ್ಲಿಸಲಾಗುತ್ತದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ದಾವಣಗೆರೆ, ರಾಯಚೂರು, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ.

ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಯಾವ ಜಿಲ್ಲೆಗಳ ಪಿಡಿ ಖಾತೆಯಲ್ಲಿ 1 ಕೋಟಿ ರೂ. ಹಣ ಇಲ್ಲವೋ ಅಲ್ಲಿಗೆ ಪ್ರಸ್ತಾವನೆ ಪಡೆಯದೇ ಸರ್ಕಾರ ನೇರವಾಗಿ ಆರ್‌ಟಿಜಿಎಸ್‌ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರವಾಹ ಎದುರಿಸಲು ತೆಗೆದುಕೊಂಡ ಸಿದ್ಧತೆ ಬಗ್ಗೆ ವಿವರಣೆ ನೀಡಿದ ಕಂದಾಯ ಸಚಿವ ಆರ್‌.ಅಶೋಕ್‌, ಕಳೆದ ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ 12 ಮಂದಿ ಮೃತಪಟ್ಟಿದ್ದು, 5440 ಮನೆಗಳು ಹಾನಿಯಾಗಿವೆ. ನೂರಾರು ಸಂಖ್ಯೆಯಲ್ಲಿ ಜಾನುವಾರುಗಳು ಸಾವನ್ನಪ್ಪಿವೆ. ಈವರೆಗೆ 12 ಕಾಳಜಿ ಕೇಂದ್ರ ತೆರೆಯಲಾಗಿದ್ದು, 2176 ಮಂದಿ ಆಶ್ರಯ ಪಡೆದಿದ್ದಾರೆ ಎಂದು ತಿಳಿಸಿದರು.

ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್‌ ಹಾಗೂ ಎನ್‌ಡಿಆರ್‌ಎಫ್‌ನ ತಲಾ 2 ತಂಡಗಳು ಬೆಳಗಾವಿ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಗದಗಕ್ಕೆ ಒಂದು ತಂಡ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. (ಎಂ.ಎನ್)

 

Leave a Reply

comments

Related Articles

error: