ಪ್ರಮುಖ ಸುದ್ದಿ

ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಕ್ಕಳ ಹಾಗೂ ಮಹಿಳೆಯರ ಗ್ರಾಮ ಸಭೆ : ಜಿಲ್ಲಾಧಿಕಾರಿ ಸೂಚನೆ

ರಾಜ್ಯ( ಮಡಿಕೇರಿ) ಅ.25 :- ಇದೇ ನ.14 ರಂದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಕ್ಕಳ ಮತ್ತು ಮಹಿಳೆಯರ ಗ್ರಾಮ ಸಭೆಯನ್ನು ಹೆಚ್ಚಿನ ಪ್ರಚಾರ ನೀಡಿ ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ತಡೆಗೆ ಗ್ರಾಮ ಮಟ್ಟದ ಸಮಿತಿಗಳು ಹೆಚ್ಚಿನ ಮುತ್ತುವರ್ಜಿವಹಿಸಿ ಕಾರ್ಯನಿರ್ವಹಿಸಬೇಕು. ಈ ಸಂಬಂಧ ಜಿ.ಪಂ ಸಿಇಓ ಅವರಿಂದ ಆದೇಶ ಜಾರಿ ಮಾಡಿಸಿ ಗ್ರಾಮ ಸಮಿತಿಯ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುವಂತೆ ಹಾಗೂ ಬಾಲ್ಯ ವಿವಾಹದಿಂದ ರಕ್ಷಿಸಿದ ಮಕ್ಕಳ ವಿದ್ಯಾಭ್ಯಾಸ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 2019ನೇ ಜುಲೈ ಮಾಹೆಯಿಂದ ಅಕ್ಟೋಬರ್ ವರೆಗೆ ಎರಡು ಪ್ರಕರಣಗಳು ದಾಖಲಾಗಿದ್ದು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿರುವುದಾಗಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಆರುಂದತಿ ಅವರು ಮಾಹಿತಿ ನೀಡಿದರು.
ಕೌಟಿಂಬಿಕ ದೌರ್ಜನ್ಯಗಳ ಪ್ರಕರಣಗಳ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ರಾಧಾ ಅವರು ಏಪ್ರಿಲ್ ಮಾಹೆಯಿಂದ ಸೆಪ್ಟೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು 87 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 55 ಪ್ರಕರಣಗಳು ಇತ್ಯರ್ತವಾಗಿದ್ದು, 25 ಪ್ರಕರಣಗಳು ಬಾಕಿ ಇರುವುದಾಗಿ ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ಲೈಗಿಂಕ ದೌರ್ಜನ್ಯ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಲ್ವಿಚಾರಕಿಯರು ಹಾಜರಾಗುವ ಕಾರ್ಯಕ್ರಮದಲ್ಲಿ ಜನ ಪ್ರತಿನಿಧಿಗಳಿಗೆ, ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ಗ್ರಾಮ ಹೋಬಳಿ ಮಟ್ಟಗಳಲ್ಲಿ ನಡೆಯುವ ಅಂಗನವಾಡಿ ಕಾರ್ಯಕರ್ತೆಯರ ಸೆಕ್ಟೋರಲ್ ಸಭೆ, ಬಾಲವಿಕಾಸ ಸಮಿತಿ ಸಭೆಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಪ್ರತಿ ಮಂಗಳವಾರ ಹಾಗೂ ಶುಕ್ರವಾರ ನಡೆಸುತ್ತಿರುವ ಸಾಂತ್ವನ ದಿನ ಕಾರ್ಯಕ್ರಮವನ್ನು ಮತ್ತಷ್ಟು ಯಶಸ್ವಿಗೊಳಿಸಿ ಕೌಟಂಬಿಕ ದೌರ್ಜನ್ಯದಿಂದ ನೊಂದ ಮಹಿಳೆಯರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು 6 ವರ್ಷದೊಳಗಿನ ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರ ನೀಡಬೇಕು. ಕಾಲಕಾಲಕ್ಕೆ ಮಕ್ಕಳಿಗೆ ಹಾಗೂ ತಾಯಂದಿರಿಗೆ ರೋಗ ನಿರೋಧಕ ಚುಚ್ಚುಮುದ್ದು ನೀಡುವುದು, ಆರೋಗ್ಯ ತಪಾಸಣೆ, ಸಲಹಾ ಸೇವೆ, ಮಹಿಳೆಯರಿಗೆ ಆರೋಗ್ಯ ಮತ್ತು ಪೌಷ್ಠಿಕ ಶಿಕ್ಷಣ ನೀಡುವುದು, 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಾಲಾಪೂರ್ವ ಚಟುವಟಿಕೆ ಚುರುಕು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥೈರ್ಯ ನಿಧಿ ಯೋಜನೆ ,ಗೆಳತಿ ವಿಶೇಷ ಚಿಕಿತ್ಸಾ ಘಟಕದ ಹಾಗೂ ಚಿಕಿತ್ಸಾ ಘಟಕದಲ್ಲಿ ದಾಖಲಾದ ಪ್ರಕರಣಗಳು, ಗೆಳತಿ ವಿಶೇಷ ಚಿಕಿತ್ಸಾ ಘಟಕಕ್ಕೆ ಬಿಡುಗಡೆಯಾದ ಅನುದಾನದ ಕುರಿತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಆರುಂದತಿ ಅವರು ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಮಾತೃ ಪೂರ್ಣ ಯೋಜನೆಯ ಅನುಷ್ಟಾನ ಪ್ರಗತಿ ಮತ್ತು ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯಲ್ಲಿ ಸೆಪ್ಟಂಬರ್ ಅಂತ್ಯದ ವರೆಗೆ ಒಟ್ಟು 5293 ಪಲಾನುಭವಿಗಳು ಇದ್ದು 224.12 ಲಕ್ಷಗಳನ್ನು ಪಲಾನುಭವಿಗಳಿಗೆ ಮೂರು ಕಂತುಗಳಲ್ಲಿ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಧಾ ಅವರು ಸಭೆಗೆ ಮಾಹಿತಿ ನೀಡಿದರು
ಸಭೆಯಲ್ಲಿ ಜಿಲ್ಲಾ ವೈದ್ಯಕೀಯ ಅಧೀಕ್ಷಕರಾದ ಡಾ ಲೊಕೇಶ್ ಕೌಟುಂಬಿಕ ದೌರ್ಜನ್ಯ ತಡೆ ಸಮಿತಿ ಸದಸ್ಯರಾದ ಮೀನಾಕುಮಾರಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸಂಪತ್ತ್‍ಕುಮಾರ್ ಕರ್ಮಿಕ ಕಲ್ಯಾಣಾಧಿಕಾರಿ ಯಾತ್ನಟ್ಟಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: