ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಪ್ರಥಮ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಆಯ್ಕೆ

ಮೈಸೂರು,ನ.2:- ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಥಮ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರನ್ನು ಆಯ್ಕೆಮಾಡಲಾಗಿದೆ.

ಹತ್ತು ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿಯೇ ಮಾದರಿಯಾದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಡಿಸೆಂಬರ್ 14 ಮತ್ತು 15ರಂದು ಹುಣಸೂರು ತಾಲೂಕಿನ ಗವಾಡಗೆರೆಯಲ್ಲಿ ಜಿಲ್ಲಾ ಪತ್ರಕರ್ತರ ಪ್ರಪ್ರಥಮ ಸಮ್ಮೇಳನ ಆಯೋಜಿಸಲು ಮುಂದಾಗಿದೆ.

ಸಂಘದ ಅಧ್ಯಕ್ಷರಾದ  ಸಿ. ಕೆ ಮಹೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಸಮಾಲೋಚಿಸಿ,ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅಂಶಿ ಪ್ರಸನ್ನಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಳೆದ ಮೂರು ದಶಕಗಳಿಗೂ ಮಿಗಿಲಾಗಿ ಮೈಸೂರು ಪತ್ರಿಕೋದ್ಯಮದಲ್ಲಿರುವ ಅಂಶಿ ಪ್ರಸನ್ನ ಕುಮಾರ್ ಅವರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಿಶೇಷ ಗೌರವ ಪ್ರಶಸ್ತಿ, ರಾಜ್ಯ ಸರ್ಕಾರದ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ, ಬೆಂಗಳೂರು ಪ್ರೆಸ್ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಡಿವಿಜಿ ಪ್ರಶಸ್ತಿ ಸೇರಿದಂತೆ ಸುಮಾರು ಮೂವತ್ತಕ್ಕೂ ಹೆಚ್ಚು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಈವರೆಗೆ ಸುಮಾರು 20 ಕೃತಿಗಳನ್ನು ಪ್ರಕಟಿಸಿದ್ದಾರೆ.ಪ್ರಸ್ತುತ ಮೈಸೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಧ್ಯಯನ ಮಂಡಳಿಯ ಸದಸ್ಯರಾಗಿದ್ದಾರೆ.

ಸಮ್ಮೇಳನದ ಉದ್ಘಾಟನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗವಾಡಗೆರೆ ಶ್ರೀ ನಟರಾಜ ಸ್ವಾಮೀಜಿ ಮೊದಲಾದವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಇದಲ್ಲದೆ ಸಮ್ಮೇಳನವು ಪತ್ರಕರ್ತರು ಜ್ಞಾನಾರ್ಜನೆಗೆ ಪೂರಕವಾಗಿರಬೇಕು ಎಂಬ ಉದ್ದೇಶದಿಂದ ಅಭಿವೃದ್ಧಿ ಪತ್ರಿಕೋದ್ಯಮದ ಖ್ಯಾತನಾಮರಾದ ಸಾಯಿನಾಥ್, ರಾಜಕೀಯ ಸಾಮಾಜಿಕ ವಿಶ್ಲೇಷಣಾತ್ಮಕ ವರದಿಗಳಿಗೆ ಹೆಸರಾದ ಡಿ ಉಮಾಪತಿ ಮೊದಲಾದವರನ್ನು ಆಹ್ವಾನಿಸಿ ಮೂರು ವಿಚಾರ ಗೋಷ್ಠಿಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸ್ಮರಣ ಸಂಚಿಕೆಯನ್ನು ಹೊರತರಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: