ದೇಶಪ್ರಮುಖ ಸುದ್ದಿ

ಅಯೋಧ್ಯೆ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಹೆಚ್ಚಿದ ಭದ್ರತೆ

ನವದೆಹಲಿ,ನ.11-ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ ಪಂಚಸದಸ್ಯ ಸಂವಿಧಾನ ಪೀಠದಲ್ಲಿದ್ದ ನ್ಯಾಯಮೂರ್ತಿಗಳಿಗೆ ಕೇಂದ್ರ ಸರ್ಕಾರ ಭದ್ರತೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳ ನಿವಾಸಕ್ಕೆ ಶನಿವಾರ ರಾತ್ರಿಯಿಂದಲೇ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸದ್ಯ ನ್ಯಾಯಮೂರ್ತಿಗಳಿಗೆ ಬೆದರಿಕೆ ಬಂದಿಲ್ಲ. ಅಪಾಯ ಕೂಡ ಇಲ್ಲ. ಆದರೆ ಮುನ್ನೆಚ್ಚರಿಕೆಯಾಗಿ ಭದ್ರತೆ ಹೆಚ್ಚಿಸಿದ್ದೇವೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯಾಯಮೂರ್ತಿಗಳ ಸಂಚಾರ ವಾಹನಕ್ಕೆ ಕಾವಲಾಗಿ ಸಶಸ್ತ್ರ ಪಡೆಗಳ ಬೆಂಗಾವಲು ಜತೆಯಲ್ಲೇ ಸಾಗಲಿದೆ. ನ್ಯಾಯಮೂರ್ತಿಗಳ ಸುತ್ತ ಭದ್ರತಾ ಸಿಬ್ಬಂದಿ ಸದಾ ಇರುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್‍.ಎ.ಬೋಬ್ಡೆ, ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪಂಚಸದಸ್ಯ ಸಂವಿಧಾನ ಪೀಠದಲ್ಲಿದ್ದ ನ್ಯಾಯಮೂರ್ತಿಗಳು. ಇವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ. (ಎಂ.ಎನ್)

Leave a Reply

comments

Related Articles

error: